ಚಿಕ್ಕಮಗಳೂರು | ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ; ಸಿ.ಟಿ.ರವಿ ಮನೆಗೆ ಮುತ್ತಿಗೆ ಯತ್ನ

Update: 2024-12-19 14:53 GMT

ಚಿಕ್ಕಮಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮನೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಗುರುವಾರ ನಗರದಲ್ಲಿ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿರೋಧ ಒಡ್ಡಿದ ಘಟನೆಯೂ ನಡೆಯಿತು.

ಈ ವೇಳೆ ಸಿ.ಟಿ.ರವಿ ಮನೆ ಎದುರು ಹೈಡ್ರಾಮಾವೇ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಸ್ಥಳದಲ್ಲಿ ಪೊಲೀಸರು ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದ ಘಟನೆಯೂ ಜರುಗಿತು.

ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಖರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ತಾಲೂಕು ಕಚೇರಿ ಸಮೀಪ ಜಮಾಯಿಸಿದ್ದರು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಿ.ಟಿ.ರವಿ ಮನೆ ಮುತ್ತಿಗೆ ಹಾಕುತ್ತಾರೆಂಬ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಸಿ.ಟಿ.ರವಿ ಮನೆ ಮುಂದೆ ಜಮಾವಣೆಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ಬಸವನಹಳ್ಳಿ ರಸ್ತೆಯಲ್ಲಿರುವ ಸಿ.ಟಿ.ರವಿ ಮನೆ ಎದುರು ಬಿಗಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಬಸವನಹಳ್ಳಿ ರಸ್ತೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರು ಮುಖಾಮುಖಿಯಾಗುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರೆ, ಮತ್ತೊಂದು ಕಡೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಿಗುವಿನ ವಾತಾವರಣ ನಿರ್ಮಾಣ ಆಗುವ ಮುನ್ಸೂಚನೆ ಅರಿತ ಎಸ್ಪಿ ಡಾ.ವಿಕ್ರಮ್ ಅಮಟೆ, ಎಎಸ್ಪಿ ಕೃಷ್ಣಮೂರ್ತಿ ಖುದ್ದು ರಸ್ತೆಗಳಿದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳದಲ್ಲಿದ್ದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ವಶಕ್ಕೆ ಪಡೆದರು.

ಇದೇ ವೇಳೆ ಬಿಜೆಪಿ ಪಕ್ಷದ ಮತ್ತೊಂದು ತಂಡ ಕೆ.ಎಂ.ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿತ್ತು. ಈ ವೇಳೆ ಅಲ್ಲಿದ್ದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News