ಮಹಿಳಾ ದೌರ್ಜನ್ಯ ಪ್ರಕರಣ | 15 ದಿನಗಳೊಳಗೆ ಸಮಗ್ರ ವರದಿಗೆ ಸೂಚನೆ : ಡಾ.ನಾಗಲಕ್ಷ್ಮೀ ಚೌಧರಿ
ಚಿಕ್ಕಮಗಳೂರು : ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು, ಮಹಿಳೆಯರ ನಾಪತ್ತೆ, ಪೊಕ್ಸೊ ಕೇಸ್‍ಗಳು, ಬಾಲ್ಯವಿವಾಹ ಪ್ರಕರಣಗಳು, ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಣೆಯಲ್ಲಿನ ಲೋಪಗಳು ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದ ಇಲಾಖೆಗಳು ಯಾವ ರೀತಿಯಲ್ಲಿ ಸ್ಪಂದಿಸಿವೆ ಎಂಬ ಬಗ್ಗೆ ಮುಂದಿನ 15 ದಿನಗಗಳೊಳಗೆ ಸಮಗ್ರ ವರದಿ ನೀಡುವಂತೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.
ಶನಿವಾರ ನಗರದ ಅರಳಗುಪ್ಪೆ ಮಲ್ಲೇಗೌಡ ಸರಕಾರಿ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಜಿಲ್ಲಾ ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಮಹಿಳೆಯರ ಮೇಲಿನ ದೌರ್ಜನ್ಯವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ಮಾಡಿ ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯದ ಸ್ಥಿತಿಗತಿಯನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ ಈಗಾಗಲೇ 9 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಶನಿವಾರ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಇಲ್ಲಿನ ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆʼ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಚರ್ಚಿಸಿ, ಜಿಲ್ಲೆಯಲ್ಲಿನ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿ ಕೇಳಿದ್ದೇನೆ. ಹಾಗೆಯೇ ಕಾರ್ಮಿಕ ಇಲಾಖೆ ಅಧಿಕಾರಿಯೊಂದಿಗೆ ಚಿರ್ಚಿಸಿ, ಕಾಫಿತೋಟಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರಿಗೆ ಇಲಾಖೆ ಯಾವ ರೀತಿ ಸ್ಪಂದಿಸುತ್ತಿದೆ ಎಂಬ ಬಗ್ಗೆ ವರದಿ ಕೇಳಿದ್ದೇನೆ. ಲೈಂಗಿಕ ದೌರ್ಜನ್ಯ ಪ್ರಕರಣ, ಮಕ್ಕಳ ರಕ್ಷಣೆ, ಸರಕಾರ ಸೌಲಭ್ಯ ವಿತರಣೆ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು.
ಜಿಲ್ಲೆಯಲ್ಲಿ 250 ಮಹಿಳೆಯರು ಕಾಣೆಯಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾಫಿತೋಟಗಳಲ್ಲಿ ಕಾರ್ಮಿಕ ಮಹಿಳೆಯರ ಮೇಲಿನ ದೌರ್ಜನ್ಯ, ಕಾರ್ಮಿಕ ಮಹಿಳೆಯರಿಗೆ ಎಸ್ಟೇಟ್‍ಗಳಲ್ಲಿ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ವ್ಯಾಪಕ ದೂರುಗಳು ತಮ್ಮ ಗಮನಕ್ಕೆ ಬಂದಿದೆ. ಕೆಲ ಪ್ರಕರಣಗಳು ತನಿಖೆ ಹಂತದಲ್ಲಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಐದು ವರ್ಷದ ಬಾಲಕಿಯ ಹತ್ಯೆಯಾಗಿದ್ದು, ತಂದೆಯೇ ತನ್ನ ಮಗಳನ್ನು ಕೊಲೆ ಮಾಡಿರುವುದು ಸಾಬೀತಾಗಿದೆ. ಈ ಎಲ್ಲ ಪ್ರಕರಗಳ ಬಗ್ಗೆ 15 ದಿನಗಳೊಳಗೆ ವರದಿ ನೀಡಲು ಸೂಚಿಸಿದ್ದೇನೆ ಎಂದರು.
ತಾಯಿ ಮಗು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಹಾಸಿಗೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇರುವುದು ಕಂಡು ಬಂದಿದೆ. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ತುಂಬು ಗರ್ಭಿಣಿಯರನ್ನು ಸುಖಾಸುಮ್ಮನೆ ಅಲೆದಾಡಿಸುವುದು ಹಾಗೂ ರಕ್ತ ಪರೀಕ್ಷೆ ವೇಳೆ ವಿಳಂಬವಾಗುತ್ತಿದೆ. ಇದರಿಂದ ತುಂಬು ಗರ್ಭಿಣಿಯರಿಗೆ ತೊಂದರೆಯಾಗುತ್ತಿರುವ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ಆಪರೇಷನ್ ಕೊಠಡಿಯಲ್ಲಿ ಕೆಲ ಗೊಂದಲದ ಕಾರಣದಿಂದ ಪಾವಗಡದಲ್ಲಿ ಒಂದೇ ದಿನ ನಾಲ್ಕು ಜನ ಮಹಿಳೆಯರು ಸಾವನಪ್ಪಿದ್ದಾರೆ. ಅಂತಹ ಪ್ರಕರಣಗಳು ಜಿಲ್ಲೆಯಲ್ಲೂ ಮರುಕಳಿಸದಂತೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇನೆ. ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಿದ್ದು, ಹೊಸ ಕಟ್ಟಡ ನಿರ್ಮಾಣ ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
ಗರ್ಭಿಣಿ ಮತ್ತು ಮಕ್ಕಳ ಆಸ್ಪತ್ರೆ, ಜಿಲ್ಲಾಸ್ಪತ್ರೆ ಪರಿಶೀಲನೆ ಬಳಿಕ ತೇಗೂರು ಗ್ರಾಮದಲ್ಲಿರುವ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಡಾ.ನಾಗಲಕ್ಷ್ಮೀ ಚೌಧರಿ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮೆಡಿಕಲ್ ಕಾಲೇಜು ಡೀನ್ ಎಂ.ಆರ್.ಹರೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು, ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಸೀಮಾ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಸಿ.ರಂಗನಾಥ್ ಸೇರಿದಂತೆ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.