ಸಂವಿಧಾನ ಭಾರತವನ್ನು ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿಸಿದೆ : ಕೆ.ಜೆ.ಜಾರ್ಜ್

ಚಿಕ್ಕಮಗಳೂರು: ಸಂವಿಧಾನದ ಆಶಯದಂತೆ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಯನ್ನು ನೀಡುವ ದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚ ಗ್ಯಾರೆಂಟಿ ಯೋಜನೆಗಳನ್ನು ರಾಜ್ಯದ ಜನತೆಗೆ ಸಮರ್ಪಕವಾಗಿ ತಲುಪಿಸುತ್ತಿದ್ದಾರೆ. ಸಂವಿಧಾನದ ಆಶಯದಂತೆಯೇ ರಾಜ್ಯದಲ್ಲಿ ಶಾಂತಿ ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರಕಾರ 6ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತಂದು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಿಸಿದ್ದಾರೆ.
ರವಿವಾರ ನಗರದ ಸುಭಾಶ್ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದ ಸಂವಿಧಾನ ರಚನಾ ಸಮಿತಿ ಹಲವು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ನಮ್ಮ ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ, ಧಾರ್ಮಿಕ ವ್ಯವಸ್ಥೆಗೆ ಪೂರಕವಾದ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ. ಈ ಸಂವಿಧಾನದ ಮೂಲಕ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಪರಿಕಲ್ಪನೆಯನ್ನು ಸಾಕಾರಗೊಳ್ಳುತ್ತಿದೆ ಎಂದರು.
ಸಂವಿಧಾನ ಭಾರತವನ್ನು ಪ್ರಬಲ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿಸಿದೆ. ಎಲ್ಲರಿಗೂ ಸಮಾನ ಹಕ್ಕುಗಳು ಹಾಗೂ ಅವಕಾಶಗಳನ್ನು ನೀಡಿದೆ ಎಂದ ಅವರು, ಜ.26, 1950ರಂದು ಅರ್ಥಪೂರ್ಣವಾದ ಲಿಖಿತ ಸಂವಿಧಾನವನ್ನು ದೇಶ ಅಳವಡಿಸಿಕೊಂಡಿದೆ. ಈ ದಿನ ಸುವರ್ಣ ಅಕ್ಷರದಲ್ಲಿ ಬರೆದಿಡುವಂತಹ ದಿನವಾಗಿದೆ ಎಂದರು.
2024ರಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿಯಿಂದಾಗಿ ಶೇ.12ರಷ್ಟು ಅಪರಾಧ ಪ್ರಕರಣಗಳಲ್ಲಿ ಇಳಿಕೆಯಾಗಿದ್ದು, ಶೇ.10ರಷ್ಟು ಅಪಘಾತಗಳ ಸಂಖ್ಯೆ ಕಡಿಮೆಗೊಳಿಸಿರುವುದು ಶ್ಲಾಘನೀಯ ಎಂದ ಅವರು, ಆರು ಜನ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ನಕ್ಸಲ್ ಮುಕ್ತ ರಾಜ್ಯ ಮಾಡುವುದರೊಂದಿಗೆ ರಾಜ್ಯದಲ್ಲಿ ಶಾಂತಿ ಸಾಮರಸ್ಯ, ಹಿಂಸಾತ್ಮಕ ಚಟುವಟಿಕೆಗಳಿಗೆ ಕಡಿವಾಣ ಹಾಕಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ರಾಜ್ಯ ಸರಕಾರ ಮಾಡಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಚ್.ಡಿ.ತಮ್ಮಯ್ಯ ವಹಿಸಿದ್ದರು. ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಸಿ.ಟಿ.ರವಿ, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಕೃಷಿ ಮತ್ತು ರಫ್ತು ಮಂಡಳಿ ಅಧ್ಯಕ್ಷ ಬಿ.ಎಚ್.ಹರೀಶ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಡಾ.ವಿಕ್ರಮ್ ಅಮಟೆ, ಜಿ.ಪಂ.ಸಿಇಒ ಎಚ್.ಎಸ್.ಕೀರ್ತನಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.