ಮೂಡಿಗೆರೆ ಬಿಜೆಪಿ ಮಂಡಲ ಅಧ್ಯಕ್ಷರ ನೇಮಕ; ಭುಗಿಲೆದ್ದ ಅಸಮಾಧಾನ
ಚಿಕ್ಕಮಗಳೂರು: ಜಿಲ್ಲೆಯ ಬಿಜೆಪಿ ವಿವಿಧ ಮಂಡಲಗಳಿಗೆ ಶುಕ್ರವಾರ ನೂತನ ಅಧ್ಯಕ್ಷರ ಘೋಷಣೆಯಾಗಿದ್ದು, ಮೂಡಿಗೆರೆ ಮಂಡಲದ ನೂತನ ಅಧ್ಯಕ್ಷರ ಘೋಷಣೆ ಬೆನ್ನಿಗೆಯೇ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಅಸಮಾಧಾನಗೊಂಡವರ ತಂಡ ಬಿಜೆಪಿ ಮುಖಂಡ ಹಾಗೂ ತಾಪಂ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ ಮಾಡಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಡಿಗೆರೆ ಮಂಡಲ ಅಧ್ಯಕ್ಷರಾಗಿ ಪಕ್ಷದ ಹಿರಿಯ ಮುಖಂಡ ಟಿ.ಎಂ.ಗಜೇಂದ್ರ ಅವರನ್ನು ನೇಮಿಸಿ ಪಕ್ಷದ ಮುಖಂಡರು ಶುಕ್ರವಾರ ಆದೇಶ ಹೊರಡಿಸಿದ್ದು, ಈ ನೇಮಕದ ಸುದ್ದಿ ಹರಡುತ್ತಿದ್ದಂತೆ ಮೂಡಿಗೆರೆ ಪಟ್ಟಣದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಹೈಡ್ರಾಮಾ ನಡೆಯಿತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬೂತ್ ಸಂಚಾಲಕರ ನೇಮಕಕ್ಕೆ ಸಂಬಂಧಿಸಿದಂತೆ ಶುಕ್ರವಾರ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಮುಖಂಡರಾದ ದೀಪಕ್ ದೊಡ್ಡಯ್ಯ, ರಾಜಪ್ಪ, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವರುಂದ ಮುಂತಾದವರು ಭಾಗವಹಿಸಿದ್ದರು. ಸಭೆಗೆ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು. ಸಭೆ ಮುಗಿಯುವ ಹಂತದಲ್ಲಿ ಮಂಡಲದ ನೂತನ ಅಧ್ಯಕ್ಷರ ನೇಮಕದ ಸುದ್ದಿ ಹರಡಿತ್ತು.
ಆಗ ಸ್ಥಳದಲ್ಲಿದ್ದ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ಸಂದರ್ಭದಲ್ಲಿ ಮೂಡಿಗೆರೆ ತಾಪಂ ಮಾಜಿ ಅಧ್ಯಕ್ಷ ಕೆ.ಸಿ.ರತನ್ ಮೇಲೆ ಕೆಲ ಕಾರ್ಯಕರ್ತರು ತೀವ್ರವಾಗಿ ಹಲ್ಲೆಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡ ರತನ್ ಅವರನ್ನು ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಗೆ ದಾಖಲಿಸಲಾಗಿದೆ. ರತನ್ ಅವರು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತನ್ನ ಮೇಲೆ ಪಿ.ಜಿ.ಅನುಕುಮಾರ್ ಮತ್ತು ಕನ್ನೇಹಳ್ಳಿ ಭರತ್ ಎಂಬವರು ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದಾರೆ.
ಈ ನಡುವೆ ಮಂಡಲ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮೂಡಿಗೆರೆ ಪಟ್ಟಣ ಪಂಚಾಯತ್ ಸದಸ್ಯ ಮತ್ತು ಬಣಕಲ್ ಹೋಬಳಿ ಬಿಜೆಪಿ ಅಧ್ಯಕ್ಷ ಪಿ.ಜಿ.ಅನುಕುಮಾರ್ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಕಚೇರಿ ಎದುರು ಧರಣಿ ನಡೆಸಿ ವರಿಷ್ಠರ ತೀರ್ಮಾನದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದಾರೆ ಎಂದು ತಮ್ಮ ದೂರಿದ್ದಾರೆ.
ಈ ಬೆಳವಣಿಗೆಯಿಂದ ಮೂಡಿಗೆರೆ ಬಿಜೆಪಿ ತೀವ್ರ ಮುಜುಗರಕ್ಕೀಡಾಗಿದೆ. ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಇಂತಹ ಘಟನೆ ನಡೆದಿರುವುದು ಪಕ್ಷದ ವರಿಷ್ಠರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.