ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣ | ಸಿಟಿ ರವಿಗೆ ಬೆದರಿಕೆ ಪತ್ರ
ಚಿಕ್ಕಮಗಳೂರು: ಬೆಳಗಾವಿ ಅಧಿವೇಶನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ಜೀವ ಬೆದರಿಕೆ ಪತ್ರವೊಂದು ಬಂದಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಳಿ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ.
“ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ. ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಕುರಿತು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮಾತನಾಡಿ, "ಅಪರಿಚಿತ ವ್ಯಕ್ತಿಗಳಿಂದ ಎಂಎಲ್ಸಿ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಈ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ" ಎಂದು ತಿಳಿಸಿದ್ದಾರೆ.