ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ

Update: 2024-07-20 11:52 GMT

PC : x/@CMofKarnataka

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ.ಬದಲಾಗಿ ಸ್ವಾರ್ಥಿ ಮನುಷ್ಯರ ಸೃಷ್ಟಿ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಭೋವಿ ಗುರುಪೀಠದ ಸಿದ್ಧರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

"ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲ ಕಸುಬನ್ನಷ್ಟೆ ಮಾಡಿಕೊಂಡು ಹಿಂದುಳಿದರು. ಶೋಷಿತ ಸಮುದಾಯಗಳ ವಿಮೋಚನೆಗೆ ಹೋರಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣದಿಂದಲೇ ಮೇದಾವಿಯಾದರು. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ವಿವರಿಸಿದರು.

ʼಶತಮಾನಗಳ ಕಾಲ ಗುಲಾಮಗಿರಿ ಇದ್ದುದರಿಂದ ತಳಸಮುದಾಯಗಳು ಹಿಂದೆ ಉಳಿದವು. ಈಗಲೂ ಶಿಕ್ಷಣದ ಕೊರತೆಯಿಂದ ಆ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಸ್ವಾಭಿಮಾನ ಬೆಳೆಸಿಕೊಂಡು ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬರಬೇಕುʼ ಎಂದರು.

ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಶಿಕ್ಷಣ ಪಡೆಯಲು ಸಾಧ್ಯವಾಗಿಲ್ಲ. ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ಎಸ್ ಸಿ/ ಎಸ್ ಟಿ ಸಮುದಾಯಗಳ‌ ಜನಸಂಖ್ಯೆ ರಾಜ್ಯದಲ್ಲಿ ಶೇ.24 ಇದೆ. ಈ ಜನಸಂಖ್ಯೆಗೆ ಸಮವಾಗಿ ಅಭಿವೃದ್ಧಿ ಆಯವ್ಯಯದ ಶೇ.24ರಷ್ಟು ಹಣವನ್ನು ಈ ಸಮುದಾಯಗಳ ಏಳಿಗೆಗಾಗಿ ಮೀಸಲಿಟ್ಟಿದ್ದು ನಮ್ಮ ಸರ್ಕಾರ. ಭೋವಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು, ನಮ್ಮ ಸರ್ಕಾರ. ಭೋವಿ ಸಮುದಾಯದ ಪ್ರತಿನಿಧಿಯನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದು ಹೇಳಿದರು.

ಸಚಿವರಾದ ಶಿವರಾಜ್ ತಂಗಡಗಿ, ಡಿ.ಸುಧಾಕರ್, ಸತೀಶ್ ಜಾರಕಿಹೊಳಿ, ಶಾಸಕರಾದ ರಘುಮೂರ್ತಿ, ವೀರೇಂದ್ರ ಪಪ್ಪಿ, ಎಚ್.ವಿ.ವೆಂಕಟೇಶ್, ಶ್ರೀನಿವಾಸ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದರಾದ ಚಂದ್ರಣ್ಣ ಸೇರಿ ಹಲವು ಮಂದಿ ಸಮಾಜದ ಮುಖಂಡರು ಮತ್ತು ಸಮುದಾಯದ ಸ್ವಾಮೀಜಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News