ಕಾಲರಾ ಕುರಿತ ವದಂತಿಗಳಿಗೆ ಕಿವಿಗೊಡಬೇಡಿ: ಸಚಿವ ದಿನೇಶ್ ಗುಂಡೂರಾವ್

Update: 2024-04-11 03:05 GMT

ಬೊಂಡ ಫ್ಯಾಕ್ಟರಿಗೆ ಭೇಟಿನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು  

ಮಂಗಳೂರು: ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದೆ. ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ .

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಣ್ಣೂರು, ತುಂಬೆ ಮತ್ತು ಅಡ್ಯಾರ್ ಪ್ರದೇಶದ ನಿವಾಸಿಗಳಲ್ಲಿ ವಾಂತಿ ಭೇದಿ ಕಂಡುಬಂದಿರುವ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲ್ಯಾಂಡ್ಸ್ ಫ್ಲೇವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿಯ ಐಸ್ ಕ್ರೀಮ್ ಮತ್ತು ಎಳನೀರನ್ನು ಕುಡಿದ ಬಳಿಕ ಜನರಲ್ಲಿ ವಾಂತಿ ಭೇದಿ ಕಂಡು ಬಂದಿರುವುದಾಗಿ ತಿಳಿದುಬಂದಿದೆ. ಸೋಮವಾರದಂದು ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿರುವ ಕುರಿತು ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಆಹಾರ ಸುರಕ್ಷತಾ ಅಧಿಕಾರಿ ಯವರು ಫ್ಯಾಕ್ಟರಿಗೆ ಭೇಟಿ ನೀಡಿ ಎಳನೀರು ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿರುತ್ತಾರೆ. ಇಡೀ ಫ್ಯಾಕ್ಟರಿಯನ್ನ ಬಂದ್ ಮಾಡಿ ಶುಚಿಗೊಳಿಸಲಾಗಿದೆ. ಫಳ್ನೀರ್ ನಲ್ಲಿರುವ ಹೈಲ್ಯಾಂಡ್ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಎಲ್ಲ ಕ್ರಮಗಳನ್ನ ಕೈಗೊಳ್ಳುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ. ಸಾರ್ವಜನಿಕರು ಕಾಲರಾ ಎಂಬ ವದಂತಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡುತ್ತೇನೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News