ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮಕ್ಕೆ ಆಗ್ರಹ

Update: 2023-12-25 11:25 GMT

ಮಂಗಳೂರು: ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನೆ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿದ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಎಪಿಸಿಅರ್ ಕರ್ನಾಟಕ ಚಾಪ್ಟರ್ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶರಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವ ಕುರಿತು ಹೇಳಿಕೆ ನೀಡಿ ಮೂಲಭೂತ ಹಕ್ಕನ್ನು ಎತ್ತಿ ಹಿಡಿಯುವ ಕುರಿತು ಹೇಳಿದ್ದರು. ಈ ಹೇಳಿಕೆಯನ್ನು ಉಲ್ಲೇಖಿಸಿ ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಕಾರುವ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಭಟ್ ರಾಜ್ಯದಲ್ಲಿ ಕೋಮು ದ್ವೇಷದ ಭಾಷಣ ಮಾಡಿ ಶಾಂತಿ ಸುವ್ಯವಸ್ಥೆ ಕದಡುವ ನಿರಂತರ ಪ್ರಯತ್ನದಲ್ಲಿದ್ದು, ಈ ಮುಂಚೆಯೂ ಕೂಡ ಅವರ ಹಲವು ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ದ್ವೇಷ ಭಾಷಣ ಮಾಡಿದ್ದಾರೆ. ಇದೀಗ ಮತ್ತೊಮ್ಮೆ ಸಂವಿಧಾನ ಕೊಟ್ಟ ಧಾರ್ಮಿಕ ಸ್ವಾತಂತ್ರ್ಯದ ಅನುಗುಣವಾಗಿ ವಿದ್ಯಾರ್ಥಿನಿಯರು ಧರಿಸುವ ಶಿರವಸ್ತ್ರದ ಕುರಿತು ಆಧಾರ ರಹಿತವಾಗಿ ಮಾತನಾಡುತ್ತ ಮುಸ್ಕಾನ್ ಎಂಬ ವಿದ್ಯಾರ್ಥಿನಿಯ ಕುರಿತು ಮಾನಹಾನಿಕಾರ ಹೇಳಿಕೆ ನೀಡುತ್ತ ಇಡೀ ಮುಸ್ಲಿಂ ಸಮುದಾಯ ಮತ್ತು ಮಹಿಳೆಯರ ಕುರಿತು ದ್ವೇಷಕಾರುವ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹೇಳಿಕೆಗಳನ್ನು ನೀಡಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ ಎಂದು ಹೇಳಿದ್ದಾರೆ.

"ಮುಸ್ಲಿಮರ ಸಂಖ್ಯೆ ಹೆಚ್ಚಾಗುತ್ತಿದೆ. ಈ ದೇಶವನ್ನು ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕು. ನಮ್ಮ ದೇಶವನ್ನು ಉಳಿಸಬೇಕು ಎಂದು ಹೇಳಿ ಸಾರ್ವಜನಿಕರ ನಡುವೆ ಧಾರ್ಮಿಕ ಸಂಘರ್ಷ ಹುಟ್ಟು ಹಾಕಲು ಯತ್ನ ನಡೆಸಿದ್ದಾರೆ" ಎಂದು ಆರೋಪಿಸಿದ್ದಾರೆ.

ಈ ಎಲ್ಲ ಹೇಳಿಕೆಗಳಲ್ಲಿ ಆಧಾರ ರಹಿತವಾಗಿ ಕಲ್ಲಡ್ಕ ಪ್ರಭಾಕರ್ ಭಟ್ ಇಡೀ ಮುಸ್ಲಿಂ ಸಮಯದಾಯದ ವಿರುದ್ಧ ಪ್ರಮುಖವಾಗಿ ಮಹಿಳೆಯರ ವಿರುದ್ಧ ದ್ವೇಷ ಭಾಷಣ ಮಾಡುತ್ತ ಜನರಲ್ಲಿ ಆತಂಕ ಸೃಷ್ಟಿಸುವ, ಗಲಭೆ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದು ಅವರ ವಿರುದ್ಧ ಕೂಡಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೇಂದು ಎಂದು ಹುಸೇನ್ ಕೋಡಿಬೆಂಗ್ರೆ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News