ಮಂಡ್ಯದಲ್ಲಿ ಧ್ವಜ ವಿವಾದ: ಮಂಗಳೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

Update: 2024-01-29 09:59 GMT

ಮಂಗಳೂರು, ಜ. 29: ಮಂಡ್ಯದಲ್ಲಿ ನಡೆದ ಧ್ವಜ ವಿವಾದಕ್ಕೆ ಸಂಬಂಧಿಸಿ ನಗರದ ಪಿವಿಎಸ್ ಜಂಕ್ಷನ್ ಸಮೀಪವಿರುವ ದ.ಕ. ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬಿಜೆಪಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಭಾರತೀಯ ಜನತಾ ಪಾರ್ಟಿ ಮೈಸೂರು ವಿಭಾಗೀಯ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಈ ಸಂದರ್ಭ ಮತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತಾಗಿದೆ. ಇದಕ್ಕೆ ತಕ್ಕುದಾದ ಶಾಸ್ತಿಯನ್ನು ಮುಂದಿನ ದಿನಗಳಲ್ಲಿ ಪ್ರಜ್ಞಾವಂತ ಮತದಾರರು ನೀಡಲಿದ್ದಾರೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ 500ವರ್ಷಗಳ ಕನಸಾಗಿದ್ದು, ಈ ಸಂಭ್ರಮವನ್ನು ದೇಶಕ್ಕೆ ದೇಶವೇ ಸಂಭ್ರಮಿಸಿದೆ. ಈ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಹನುಮ ಧ್ವಜವನ್ನು ಹಾಕಲಾಗಿದೆ. ಹಿಂದೂಸ್ಥಾನದಲ್ಲಿ ಹಿಂದೂಗಳ ಧ್ವಜ ಹಾಕಲು ಯಾರನ್ನಾದರೂ ಕೇಳಬೇಕೆ? ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ಸಿಗರು ಮನ ಬಂದಂತೆ ವರ್ತಿಸುತ್ತಿದ್ದಾರೆ. ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಅವರನ್ನು ಬಂಧಿಸುವ ಮೂಲಕ ಆಡಳಿತ ಪಕ್ಷ ತಪ್ಪು ನಿರ್ಧಾ ತೆಗೆದುಕೊಂಡಿದೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್ ಮಾತನಾಡಿ, ಮಂಡ್ಯದಲ್ಲಿ ಧ್ವಜ ವಿವಾದ ಸೃಷ್ಟಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸಣ್ಣತನವನ್ನು ಪ್ರದರ್ಶನ ಮಾಡಿದೆ. ಇದನ್ನು ನೋಡಿ ಬಿಜೆಪಿ ಸುಮ್ಮನಿರಲು ಸಾಧ್ಯವಿಲ್ಲ ಎಂದರು.

ಪ್ರತಿಭಟನಾ ಸಭೆಯಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಜಿ.ಪಂ. ಮಾಜಿ ಅಧ್ಯಕ್ಷ ಆಶಾ ತಿಮ್ಮಪ್ಪ, ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬೃಜೇಶ್ ಚೌಟ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮುಡಾ ಮಾಜಿ ಅಧ್ಯಕ್ಷ ರವಿಶಂಕರ್ ಮಿಜಾರು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಚಂದ್ರಹಾಸ್ ಉಳ್ಳಾಲ್, ಉಳಿದೊಟ್ಟು ರವೀಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಸಂಘಟನೆ ನಾಯಕರು, ಕಾರ್ಯಕರ್ತರಿಗೆ ಪೊಲೀಸ್ ಇಲಾಖೆ ಮೂಲಕ ಕಿರುಕುಳ ಆರಂಭವಾಗಿದ್ದು, ಕೂಡಲೇ ಅದನ್ನು ನಿಲ್ಲಿಸಬೇಕು. ಮಂಡ್ಯದಲ್ಲಿ ಧ್ವಜ ವಿವಾದವನ್ನು ಸೃಷ್ಟಿಸಿದ್ದು, ಮುಂದೆ ಮನೆಮನೆ, ಗಲ್ಲಿಗಳಲ್ಲಿ ಧ್ವಜ ಹಾಕುತ್ತೇವೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News