ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ: ವಿ. ಸೋಮಣ್ಣ
ಮಂಗಳೂರು, ಜು. 17: ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ 2 ತಿಂಗಳಲ್ಲಿ ರೂಪುರೇಷೆ ತಯಾರಿಸಿ ಕ್ರಮ ವಹಿಸಲಾಗುವುದು ಎಂದು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.
ರೈಲ್ವೆ ಅಭಿವೃದ್ದಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲು ಬುಧವಾರ ಮಂಗಳೂರಿಗೆ ಆಗಮಿಸಿರುವ ವಿ. ಸೋಮಣ್ಣ ಅವರು, ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.
ಕಳೆದ ಸುಮಾರು 40 ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೇ ಆಭಿವೃದ್ಧಿ ನೆನೆಗುದಿಗೆ ಬಿದ್ದಿದ್ದು, ಇದಕ್ಕೆ ಕಾಯಕಲ್ಪ ನೀಡುವ ನಿಟ್ಟನಲ್ಲಿ ಕ್ರಮ ವಹಿಸಲಾಗುವುದು. ತಮಿಳುನಾಡು, ಕೇರಳ ಮತ್ತು ಗೋವಾ, ಮಹಾರಾಷ್ಟ್ರ ನಡುವೆ ಮಂಗಳೂರು , ಕಾರವಾರ ಭಾಗದಲ್ಲಿ ರೈಲ್ವೇ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ರೀತಿ ಆಗಿಲ್ಲ. ಈ ನಿಟ್ಟಿನಲ್ಲಿ ಎರಡು ತಿಂಗಳೊಳಗೆ ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ನೀಲನಕ್ಷೆ ತಯಾರಿಸಲಾಗುವುದು ಎಂದರು.
ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರು ರೈಲ್ವೇ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.