ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ| ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸಹಿತ ಇಬ್ಬರ ಬಂಧನ

Update: 2024-12-06 15:34 GMT

ಮಂಗಳೂರು, ಡಿ.6: ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸಹಿತ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು 200 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ನೈಜೀರಿಯಾದ ಚಿಕ ಜೋಸೆಫ್ ಇಝಿ (26) ಮತ್ತು ಮೂಲತಃ ಬೆಂಗಳೂರಿನ ಪ್ರಸಕ್ತ ಮೈಸೂರಿನ ದರ್ಶನ್ ಕೆ.ಜಿ (25) ಬಂಧಿತ ಆರೋಪಿಗಳು.

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಈತನಿಗೆ ಮಾದಕ ವಸ್ತು ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್‌ಗಳ ಬಗ್ಗೆ ಮಾಹಿತಿ ನೀಡಿದ್ದ. ಅದರಂತೆ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಪೊಲೀಸರು ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ಈ ಇಬ್ಬರು ಆರೋಪಿಗಳನ್ನು ಬಂಧಿಸಿದರು.

ಆರೋಪಿಗಳಿಂದ 10,00,000 ರೂ.ಮೌಲ್ಯದ 200 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಕಾರು, 5 ಮೊಬೈಲ್ ಫೋನ್‌ಗಳು, ವಿವಿಧ ಬ್ಯಾಂಕ್‌ಗಳ 5 ಡೆಬಿಟ್ ಕಾರ್ಡ್‌ಗಳು, 7 ಸಿಮ್ ಕಾರ್ಡ್‌ಗಳು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 18,25,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಬಜ್ಪೆಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಆರೋಪಿ ಚಿಕ ಜೋಸೆಫ್ ಇಝಿ ಎಂಬಾತನು 2023ರ ಮೇ ತಿಂಗಳಲ್ಲಿ ಭಾರತಕ್ಕೆ ಉದ್ಯೋಗ ವೀಸಾದಲ್ಲಿ ಬಂದಿದ್ದನು. ಬೆಂಗಳೂರಿನ ಯಲಹಂಕದಲ್ಲಿ ನೈಜೀರಿಯಾ ಪ್ರಜೆಯ ಹೇರ್ ಕಟ್ಟಿಂಗ್ ಉದ್ಯೋಗ ಮಾಡುತ್ತಿದ್ದು, ಈ ಸಮಯ ಈತನ ವಿರುದ್ಧ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬೆಂಗಳೂರು ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಮಾರು 4 ತಿಂಗಳ ಹಿಂದೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದನು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್‌ಎಂ, ಎಸ್ಸೈ ಸುದೀಪ್ ಎಂ.ವಿ., ಎಎಸ್ಸೈ ರಾಮ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News