ನಿಗಮ, ಮಂಡಳಿಗಳಿಗೆ ಮೊದಲ ಹಂತದಲ್ಲಿ ಶಾಸಕರು, 2ನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ
ಮಂಗಳೂರು: ರಾಜ್ಯದಲ್ಲಿ ನಿಗಮ - ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಉಡುಪಿಯಲ್ಲಿ ಆಯೋಜಿಸಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಲು ಬಂದಿರುವ ಮುಖ್ಯಮಂತ್ರಿ, ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಗೃಹ ಸಚಿವರ ಮನೆಯ ಔತಣ ಕೂಟದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೈರಾಗಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, 'ಸಚಿವ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ ಲೋಕಾಭಿರಾಮ ಮಾತುಕತೆ ಬಿಟ್ಟರೆ ಯಾವುದೇ ರಾಜಕೀಯ ನಡೆದಿಲ್ಲ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ' ಎಂದು ಪ್ರತಿಕ್ರಿಯಿಸಿದರು.
'ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರುತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಿಎಂ ಅಂದ್ರೆ ಕಲೆಕ್ಷನ್ ಮಾಸ್ಟರ್ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ 'ನಾನು 1983ರಲ್ಲಿ ಶಾಸಕನಾಗಿ,ನಂತರ ಸಚಿವ ನಾದವನು. ಹರೀಶ್ ಪೂಂಜ ಇನ್ನೂ ಬಚ್ಚಾ ' ಎಂದರು.