ಮುಮ್ತಾಝ್ ಅಲಿ ಪ್ರಕರಣ: ಪೊಲೀಸರಿಂದ 6 ಮಂದಿಯ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

Update: 2025-01-07 05:07 GMT

ಸುರತ್ಕಲ್: ಧಾರ್ಮಿಕ ಮುಂದಾಳು ಹಾಗೂ ಉದ್ಯಮಿ ಬಿ.ಎಂ.ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿ ರಹ್ಮತ್ ಸೇರಿ ಒಟ್ಟು ಆರು ಮಂದಿ ಆರೋಪಿಗಳ ವಿರುದ್ಧ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ನೂರಕ್ಕೂ ಅಧಿಕ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು, ಸೋಮವಾರ ಸಂಜೆ ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯಕ್ಕೆ 2,250 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಮುಖ ಆರೋಪಿ ಎನ್ನಲಾದ ಸುರತ್ಕಲ್ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರಹ್ಮತ್ ಮತ್ತು ಆಕೆಯ ಪತಿ ಪ್ರಕರಣದ 5ನೇ ಆರೋಪಿ ಶುಐಬ್, ಎ2 ಆರೋಪಿ ಅಬ್ದುಲ್ ಸತ್ತಾರ್, ಎ3 ಆರೋಪಿ ನಂದಾವರ ನಿವಾಸಿ ಕಲಂದರ್ ಶಾಫಿ, ಎ4 ಆರೋಪಿ ಕೃಷ್ಣಾಪುರ ನಿವಾಸಿ ಮುಸ್ತಫ ಹಾಗೂ 6ನೇ ಆರೋಪಿ ಸತ್ತಾರ್ ನ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣದ ತನಿಖಾಧಿಕಾರಿಯಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

2024ರ ಅ.7ರಂದು ಮುಮ್ತಾಝ್ ಅಲಿಯವರ ಕಾರು ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಅವರ ಮೃತದೇಹ ಅ.8ರಂದು ನದಿಯಲ್ಲಿ ಪತ್ತೆಯಾಗಿತ್ತು.

ಈ ಮಧ್ಯೆ ರಹ್ಮತ್, ಅಬ್ದುಲ್ ಸತ್ತಾರ್, ಕಲಂದರ್ ಶಾಫಿ, ಮುಸ್ತಫ, ಶುಐಬ್ ಮತ್ತು ಸಿರಾಜ್ ಎಂಬವರು ಮಾನಸಿಕ ಕಿರುಕುಳದಿಂದ ಬೇಸತ್ತು ಮುಮ್ತಾಝ್ ಅಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಶಂಕೆ ವ್ಯಕ್ತಪಡಿಸಿ ಮೃತರ ಸಹೋದರ ಹೈದರ್ ಅಲಿ ಪೊಲೀಸ್ ದೂರು ನೀಡಿದ್ದರು.

ಈ ದೂರಿನನ್ವಯ ಐಪಿಸಿ 308(2), 308(5), 352, 351(2) 190 BNS ಕಾಯ್ದೆಯಡಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಇದೀಗ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News