ಡಾ.ರೇಣುಕಾ ಪ್ರಸಾದ್ ಸಹಿತ ಆರು ಮಂದಿ ದೋಷಿ: ಹೈಕೋರ್ಟ್ ಆದೇಶ
ಸುಳ್ಯ, ಸೆ.28: 12 ವರ್ಷಗಳ ಹಿಂದೆ ನಡೆದ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊ.ಎ.ಎಸ್.ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಸುಳ್ಯದ ಅಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ.ರೇಣುಕಾ ಪ್ರಸಾದ್ ಸೇರಿದಂತೆ ಆರು ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿ ಕರ್ನಾಟಕ ಹೈಕೋರ್ಟ್ ಬುಧವಾರ ಆದೇಶ ಹೊರಡಿಸಿದೆ.
ಪ್ರಕರಣದಲ್ಲಿ ರೇಣುಕಾ ಪ್ರಸಾದ್ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ 2016ರ ಅಕ್ಟೋಬರ್ 21ರಂದು ಹೊರಡಿಸಿದ್ದ ಆದೇಶ ರದ್ದು ಕೋರಿ ರಾಜ್ಯ ಸರಕಾರ (ಪುತ್ತೂರು ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ) ಹೈಕೋಟ್ ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ಜಿ.ಬಸವರಾಜ ಅವರ ನೇತೃತ್ವದ ವಿಭಾಗೀಯ ಪೀಠ ಡಾ.ರೇಣುಕಾ ಪ್ರಸಾದ್ ಸೇರಿದಂತೆ ಆರು ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿ ಆದೇಶ ನೀಡಿದೆ
ಪ್ರಕರಣದ ಒಟ್ಟು ಏಳು ಆರೋಪಿಗಳ ಪೈಕಿ ಡಾ.ರೇಣುಕಾ ಪ್ರಸಾದ್, ಮನೋಜ್ ರೈ, ಎಚ್.ಆರ್.ನಾಗೇಶ್, ವಾಮನ ಪೂಜಾರಿ, ಶರಣ್ ಪೂಜಾರಿ ಮತ್ತು ಶಂಕರ ಎಂಬಾತನನ್ನು ಮೃತ ಎ.ಎಸ್.ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಿದೆ. ಆದರೆ, ಏಳನೇ ಆರೋಪಿಯಾಗಿದ್ದ ಎಚ್.ಯು.ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಇದೇ ವೇಳೆ ಮಾನ್ಯ ಮಾಡಿದೆ. ದೋಷಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ಅಕ್ಟೋಬರ್ 5ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಕುರುಂಜಿ ವೆಂಕಟರಮಣ ಗೌಡ ಅವರು ಕೆವಿಜಿ ಅಕಾಡಮಿ ಆಫ್ ಲಿಬರಲ್ ಎಜುಕೇಶನ್ ಸಂಸ್ಥಾಪಕರಾಗಿದ್ದರು. ವಯಸ್ಸಾದ ಮತ್ತು ಅನಾರೋಗ್ಯ ಕಾಡಿದ ಕಾರಣ ಶೈಕ್ಷಣಿಕ ಸಂಸ್ಥೆಗಳ ನಿರ್ವಹಣೆ ಹೊಣೆಯನ್ನು ಅವರು ಹಿರಿಯ ಪುತ್ರ ಕೆ.ವಿ.ಚಿದಾನಂದ ಮತ್ತು ಕಿರಿಯ ಪುತ್ರ ರೇಣುಕಾ ಪ್ರಸಾದ್ ಅವರಿಗೆ ವಿಭಜನೆ ಮಾಡಿಕೊಟ್ಟಿದ್ದರು. ಈ ವೇಳೆ ಪ್ರೊ. ಎ.ಎಸ್.ರಾಮಕೃಷ್ಣ ಅವರು ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ತಂದೆ ಆಸ್ತಿ, ಶೈಕ್ಷಣಿಕ ಸಂಸ್ಥೆಗಳ ಹೊಣೆಗಾರಿಕೆ ವಿಭಜನೆಯನ್ನು ರಾಮಕೃಷ್ಣ ಅವರ ಸಲಹೆ ಮೇರೆಗೆ ಮಾಡಿದ್ದಾರೆ ಎಂದು ರೇಣುಕಾ ಪ್ರಸಾದ್ ಭಾವಿಸಿದ್ದರು. ಅಲ್ಲದೆ ಚಿದಾನಂದ ಅವರ ಪರವಾಗಿ ಕೆವಿಜಿ ಮೆಡಿಕಲ್ ಕಾಲೇಜು ವ್ಯವಹಾರಗಳನ್ನು ಸಹ ರಾಮಕೃಷ್ಣ ನೋಡಿಕೊಳ್ಳುತ್ತಿದ್ದಾರೆ ಎಂದು ಭಾವಿಸಿದ್ದ ರೇಣುಕಾ ಪ್ರಸಾದ್ ಇದರಿಂದ ತೀವ್ರ ಅಸಮಾಧಾನಗೊಂಡಿದ್ದರು. ಇದೇ ಕಾರಣಕ್ಕೆ ರಾಮಕೃಷ್ಣ ಕೊಲೆಗೆ ಸುಪಾರಿ ನೀಡಿದ್ದ ಎಂಬ ಆರೋಪ ಕೇಳಿಬಂದಿತ್ತು.
2011ರ ಎಪ್ರಿಲ್ 28ರಂದು ಬೆಳಗ್ಗೆ 7:45ರ ವೇಳೆಯಲ್ಲಿ ಅಂಬಟೆಡ್ಕ ಬಳಿಯ ಶ್ರೀಕೃಷ್ಣ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾಳಿ ನಡೆಸಿ, ಕೊಚ್ಚಿ ಕೊಲೆ ಮಾಡಿದ್ದರು. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ನಡೆಸಿದ ಪೊಲೀಸರು ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಮೊದಲ ಆರೋಪಿ ಎಂದು ಪತ್ತೆಹಚ್ಚಿದ್ದಲ್ಲದೆ, ಒಟ್ಟು ಏಳು ಮಂದಿಯನ್ನು ಆರೋಪಿಗಳಾಗಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಆದರೆ ಸಾಕ್ಷ್ಯಾಧಾರಗಳ ಕೊರತೆ ಕಾರಣ ಅವರೆಲ್ಲರನ್ನೂ ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2016ರ ಅಕ್ಟೋಬರ್ 21ರಂದು ಆದೇಶಿಸಿತ್ತು.
ಈ ಆದೇಶ ಪ್ರಶ್ನಿಸಿ ಸರಕಾರ 2017ರಲ್ಲಿ ಹೈಕೋರ್ಟ್ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿತ್ತು. ಇದೀಗ ರೇಣುಕಾಪ್ರಸಾದ್ ಹಾಗೂ ಇತರ ಐವರು ಆರೊಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿರುವ ಹೈಕೋರ್ಟ್, ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚಿನ ಕೃತ್ಯದಲ್ಲಿ ದೋಷಿ ಎಂದು ತೀರ್ಮಾನಿಸಿದೆ.
ವಾರ್ತಾಭಾರತಿ ಓದುಗರಿಗೆ ಶುಭಸುದ್ದಿ: ನಿಮ್ಮ ನೆಚ್ಚಿನ VB ಈಗ ವಾಟ್ಸ್ ಆ್ಯಪ್ ಚಾನೆಲ್ ನಲ್ಲೂ ಲಭ್ಯ
https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ