ರಸ್ತೆ ದುರಸ್ತಿಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸ್ಪೀಕರ್ ಯು.ಟಿ.ಖಾದರ್ ಸೂಚನೆ

Update: 2024-11-10 08:19 GMT

ಮಂಗಳೂರು: ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುತ್ತಾರಿನ ರಹ್ಮತ್ ಎಂಬುವವರು ಮೃತಪಟ್ಟಿರುವುದಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಅವರು ಈ ಅಪಘಾತದ ಬಗ್ಗೆ ಮಾಹಿತಿ ಪಡೆದಿದ್ದಾರೆ.

"ರಸ್ತೆ ಗುಂಡಿಗಳ ಬಗ್ಗೆ ಮಾಧ್ಯಮದಲ್ಲಿ ಬಂದ ವರದಿಯನ್ನು ಆಧರಿಸಿ ಈ ಅಪಘಾತ ಸಂಭವಿಸುವ ಕೆಲವೇ ಗಂಟೆಗಳ ಮೊದಲು ರಸ್ತೆ ದುರಸ್ತಿಗೊಳಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ರಸ್ತೆ ದುರಸ್ತಿಗೆ ಸಂಬಂಧಿಸಿ ಅಧಿಕಾರಿಗಳ ನಿರ್ಲಕ್ಷ್ಯತನ ಎದ್ದು ಕಾಣುತ್ತಿದೆ. ಅಪಘಾತದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ'' ಎಂದು ಖಾದರ್ ತಿಳಿಸಿದ್ದಾರೆ.

" ಈ ರಸ್ತೆ ಅಭಿವೃದ್ಧಿಗೆ ಈಗಾಗಲೇ 30 ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಇದರ ಟೆಂಡರ್ ಪ್ರಕ್ರಿಯೆ ಕೂಡಾ ಮುಗಿದಿದ್ದು, ಮಳೆಯ ಕಾರಣದಿಂದಾಗಿ ಕಾಮಗಾರಿ ಪ್ರಾರಂಭ ವಿಳಂಬವಾಗಿದೆ. ಪ್ರತೀ ಮಳೆಗಾಲದ ಬಳಿಕ ರಸ್ತೆಗಳ ಗುಂಡಿಗಳನ್ನು ಮುಚ್ಚುವುದು ಸಂಬಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಕರ್ತವ್ಯ. ಈ ಬಗ್ಗೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ'' ಎಂದು ಸ್ಪೀಕರ್ ಖಾದರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ಸಂದರ್ಭದಲ್ಲಿ ನೆರವಿಗೆ ಧಾವಿಸಿರುವ ಉಳ್ಳಾಲದ ಯುವಕರ ಸೇವಾ ಮನೋಭಾವವನ್ನು ಯು.ಟಿ. ಖಾದರ್ ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News