ದಾವಣಗೆರೆ | ವಕ್ಫ್ ಕಾಯ್ದೆ ವಿರೋಧಿಸಿ ಪ್ರಚೋದನಾಕಾರಿ ವಿಡಿಯೋ ಹರಿಬಿಟ್ಟ ಆರೋಪ : ಪಾಲಿಕೆ ಮಾಜಿ ಸದಸ್ಯ ಬಂಧನ
ಸಾಂದರ್ಭಿಕ ಚಿತ್ರ
ದಾವಣಗೆರೆ : ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ವಿಧೇಯಕ ಜಾರಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ವಿಡಿಯೋ ಹರಿಬಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ದಾವಣಗೆರೆ ಆಝಾದ್ ನಗರ ಠಾಣಾ ಪೊಲೀಸರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಕಬೀರ್ ಖಾನ್ ಎಂಬವರನ್ನು ರಾಜಸ್ಥಾನದ ಅಜ್ಮೀರ್‌ನಲ್ಲಿ ಬಂಧಿಸಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರಚೋದನಾಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಪರಿಶೀಲಿಸಿದ ಆಝಾದ್ ನಗರ ಠಾಣೆಯ ಪೊಲೀಸರು ಕಬೀರ್ ಖಾನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಆ ಬಳಿಕ ಪ್ರಕಣದ ಪ್ರಮುಖ ಆರೋಪಿ ಕಬೀರ್ ಖಾನ್ ನಾಪತ್ತೆಯಾಗಿದ್ದರು. ಅಲ್ಲದೆ, ಆರೋಪಿ ಪತ್ತೆಗೆ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಿನ್ ಕುಮಾರ ನೇತೃತ್ವದ ತಂಡ ರಚಿಸಲಾಗಿತ್ತು. ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ರವಿವಾರ ನ್ಯಾಯಾಧೀಶರ ಎದುರು ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪೂರ್ವವಲಯ ಪೊಲೀಸ್ ಮಹಾನಿರ್ದೇಶಕರಾದ ಡಾ.ರವಿಕಾಂತೇಗೌಡ "ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪಿ ಕಬೀರ್ ಖಾನ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದ ಮಾಹಿತಿ ಕಲೆ ಹಾಕಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ" ಎಂದು ಖಚಿತಪಡಿಸಿದರು.