ದಾವಣಗೆರೆ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ : ಇಬ್ಬರು ಪೊಲೀಸ್‌ ಸಿಬ್ಬಂದಿಗೆ ಗಾಯ

Update: 2024-09-19 17:16 GMT

ದಾವಣಗೆರೆ: ಇಲ್ಲಿನ ವೆಂಕಟೇಶ್ವರ ನಗರದಲ್ಲಿ ಗುರುವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿರುವ ಘಟನೆ ವರದಿಯಾಗಿದೆ.

ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಮೀಲಾದುನ್ನಬಿ ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಪೊಲೀಸ್ ಬಂದೋಬಸ್ತ್ ನಡುವೆಯೂ ಕಿಡಿಗೇಡಿಗಳು ಗಣೇಶೋತ್ಸವ ಮೆರವಣಿಗೆ ಮೇಲೆ ಕಲ್ಲು ತೂರಿದ್ದಾರೆ. ಇನ್‌ಸ್ಪೆಕ್ಟರ್ ಗುರು ಬಸವರಾಜ್ ಮತ್ತು ಕಾನ್‌ಸ್ಟೇಬಲ್ ರಾಘವೇಂದ್ರ ಎಂಬವರಿಗೆ ಕಲ್ಲು ತಗಲಿ ಗಾಯಗಳಾಗಿವೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದ್ದಂತೆ ಮೆರವಣಿಗೆ ಮುಂದೆ ಸಾಗಿದ್ದು, ಮತ್ತೊಮ್ಮೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಎಲ್ಲ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News