ಬಿಜೆಪಿ ಟಿಕೆಟ್ ವಂಚನೆ ಪ್ರಕರಣ | ಗೋಪಾಲ್ ಜೋಶಿ ಮನೆ ಮೇಲೆ ಪೊಲೀಸರಿಂದ ದಾಳಿ
ಹುಬ್ಬಳ್ಳಿ : ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2.25 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಎಸಿಪಿ ಚಂದನ್ ನೇತೃತ್ವದಲ್ಲಿ ಪೊಲೀಸರ ತಂಡ ಗೋಪಾಲ್ ಜೋಶಿ ಅವರ ಮನೆ ಮೇಲೆ ದಾಳಿ ನಡೆಸಿದೆ.
ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿರುವ ಪೊಲೀಸರು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನನ್ವಯ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಕೇಂದ್ರ ಸಚಿವರ ಪಾತ್ರ ಇಲ್ಲ :
ಗೋಪಾಲ್ ಜೋಶಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ದೂರುದಾರೆ ಸುನೀತಾ ಚವ್ಹಾನ್ ಅವರು, "ನಮ್ಮ ಪಕ್ಷದಿಂದ ಟಿಕೆಟ್ ಸಿಗುವ ಸಾಧ್ಯತೆ ಇತ್ತು. ಗೋಪಾಲ ಜೋಶಿಯವರು ಬಿಜೆಪಿಯಿಂದ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿದ್ದರು. ಟಿಕೆಟ್ ಕೊಡಿಸೋದಾಗಿ 2 ಕೋಟಿ ಬೇಡಿಕೆ ಇಟ್ಟು, ಬಳಿಕ 25 ಲಕ್ಷ ಹಣ ಪಡೆದುಕೊಂಡರು. ಕೊಟ್ಟ ಹಣ ವಾಪಸ್ ಮಾಡಿರಲಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ದೂರು ಕೊಟ್ಟಿದ್ದೇನೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರಲ್ಲಿ ಕೇಂದ್ರ ಸಚಿವರ ಪಾತ್ರ ಇಲ್ಲ" ಎಂದು ಸ್ಪಷ್ಟನೆ ನೀಡಿದರು.