ಸರಕಾರದ ʼಗ್ಯಾರಂಟಿʼ ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ : ಸಚಿವ ಸಂತೋಷ್ ಲಾಡ್

Update: 2024-02-03 18:10 GMT

ಹುಬ್ಬಳ್ಳಿ: ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿದೆ. ಪ್ರತಿಯೊಬ್ಬರ ಏಳಿಗೆಗೆ ಯೋಜನೆಗಳು ಸಹಕಾರಿಯಾಗಿದ್ದು, ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಹೇಳಿದರು.

ಇಂದು‌ ರೈಲ್ವೆ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ  ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರದ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೆ ತಲುಪುತ್ತಿರುವುದಕ್ಕೆ ಇಂದು ಸಮಾವೇಶದಲ್ಲಿ ಪಾಲ್ಗೊಂಡಿರುವ ಮಹಿಳೆಯರೇ ಸಾಕ್ಷಿಯಾಗಿದ್ದಾರೆ. ಮನಮೋಹನ್ ಸಿಂಗ್ ಸರಕಾರ ಅಧಿಕಾರದಲ್ಲಿದ್ದಾಗ ಆಹಾರ ಭದ್ರತೆ ಕಾನೂನು ಜಾರಿ ಯಾಗಿತ್ತು. ಆರ್.ಟಿ.ಇ ಜಾರಿಗೆ ತರಲಾಗಿದೆ. ನರೇಗಾ ಯೋಜನೆಯಡಿ 27 ಕೋಟಿ ಜನರು ಲಾಭ ಪಡೆದಿದ್ದಾರೆ. ಮೊದಲು 20 ರೂ. ಕೂಲಿ ಸಿಗುತ್ತಿತ್ತು. ಈಗ ರೂ. 320 ಪಡೆಯುತ್ತಿದ್ದಾರೆ ಎಂದು ಹೇಳಿದರು.

ಇಂದಿರಾ ಗಾಂಧಿ ಅವರು ಉಳುವವನೇ ಒಡೆಯ ಯೋಜನೆ ಜಾರಿ ಮಾಡಿದರು. ವಿಧವಾ ವೇತನ, ಗರೀಭಿ ಹಟಾವೋ ಯೋಜನೆ ಜಾರಿಗೆ ತರಲಾಯಿತು. 70 ವರ್ಷದಲ್ಲಿ ದೇಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಸರಕಾರದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸರಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ರಚಿಸಿದ ಸಂವಿಧಾನ ಕುರಿತು ಸಂವಿಧಾನ ಜಾಥಾ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News