ಮುಡಾ ಪ್ರಕರಣ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ ಹಿನ್ನೆಲೆ | ತನಿಖಾ ವರದಿ ಮರಳಿಸುವಂತೆ ಲೋಕಾಯುಕ್ತ ಮನವಿ

ಧಾರವಾಡ : ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ ಹಿನ್ನೆಲೆಯಲ್ಲಿ ಅಂತಿಮ ವರದಿ ಸಲ್ಲಿಸಲು ಸಿದ್ದತೆ ಆರಂಭಿಸಿದ ಲೋಕಾಯುಕ್ತ ಪೊಲೀಸರು ತನಿಖಾ ವರದಿ ಮರಳಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದರು.
ಹೈಕೋರ್ಟ್ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಅರಬಟ್ಟಿ ಹಾಜರಾಗಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠಕ್ಕೆ ಮನವಿ ಮಾಡಿದರು. ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ಸಲ್ಲಿಸಲಾಗಿತ್ತು. ತನಿಖಾ ವರದಿ ಯಾರ ಕೈಗೆ ನೀಡಬೇಕೆಂದು ಹೈಕೋರ್ಟ್ ಪ್ರಶ್ನೆ ಮಾಡಿತು. ಈ ವೇಳೆ ಕೋರ್ಟ್‌ನಲ್ಲಿ ಹಾಜರಿರುವ ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗೆ ಮರಳಿಸುವಂತೆ ವಕೀಲರು ಮನವಿ ಮಾಡಿದರು.
ಈ ವೇಳೆ ಪ್ರತಿಕ್ರಿಯೆ ನೀಡಿದ ನ್ಯಾ.ಎಂ.ನಾಗಪ್ರಸನ್ನ, ಭೋಜನ ವಿರಾಮದ ವೇಳೆ ಕಚೇರಿಗೆ ಬಂದು ಪಡೆದುಕೊಳ್ಳಲು ಸೂಚನೆ ನೀಡಿದರು.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕುಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಮಯದಲ್ಲಿ ನ್ಯಾ.ನಾಗಪ್ರಸನ್ನ ಅವರು ಲೋಕಾಯುಕ್ತ ಪೊಲೀಸರು ನಡೆಸುತ್ತಿರುವ ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು ಎಂದು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ್ದರು. ಬಳಿಕ ಫೆ.7ರಂದು ಹೈಕೋರ್ಟ್ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಈಗ ವಿಚಾರಣಾಧೀನ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ತನಿಖಾ ವರದಿ ಸಲ್ಲಿಸಬೇಕಿದೆ.