‘ಮುಂಬರುವ ಚುನಾವಣೆಗೆ ನಾಯಕತ್ವ’ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ : ಸತೀಶ್ ಜಾರಕಿಹೊಳಿ

Update: 2025-02-22 19:49 IST
‘ಮುಂಬರುವ ಚುನಾವಣೆಗೆ ನಾಯಕತ್ವ’ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ : ಸತೀಶ್ ಜಾರಕಿಹೊಳಿ
  • whatsapp icon

ಧಾರವಾಡ : ರಾಜ್ಯದಲ್ಲಿ ಮುಂಬರುವ ಚುನಾವಣೆಗಳನ್ನು ಯಾರ ನಾಯಕತ್ವದಲ್ಲಿ ಎದುರಿಸಬೇಕು ಎಂಬುದರ ಕುರಿತು ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಬೇರೆ ಯಾರ ನಾಯಕತ್ವದಲ್ಲಿ ಎದುರಿಸಬೇಕು ಎಂಬುದರ ಕುರಿತು ದಿಲ್ಲಿಯವರೇ ತೀರ್ಮಾನ ಮಾಡಬೇಕು. ನಾವು ಈ ಬಗ್ಗೆ ತೀರ್ಮಾನ ಮಾಡುವ ಸ್ಥಾನದಲ್ಲಿ ಇಲ್ಲ ಎಂದು ಹೇಳಿದರು.

ನಮ್ಮ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ದಿಲ್ಲಿ, ಮಹಾರಾಷ್ಟ್ರದಲ್ಲಿ ನಮ್ಮನ್ನು ಅನುಸರಿಸುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯನ್ನು ಪ್ರಶ್ನಿಸಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆಯೂ ದಿಲ್ಲಿ ನಾಯಕರನ್ನೆ ಕೇಳಬೇಕು. ನಮಗೆ ಅದರ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಸದ್ಯ ದಲಿತ ಮುಖ್ಯಮಂತ್ರಿ ಎಂಬ ಪ್ರಶ್ನೆ ಇಲ್ಲ. ನಮ್ಮ ಅಭಿಮಾನಿಗಳಿಗೆ ನಾನು ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ. ಅದೇ ರೀತಿ ಎಲ್ಲ ನಾಯಕರ ಅಭಿಮಾನಿಗಳಿಗೂ ತಮ್ಮ ನಾಯಕ ಮುಖ್ಯಮಂತ್ರಿ ಆಗಬೇಕು ಎಂದು ಬಯಸುತ್ತಾರೆ ಎಂದು ಅವರು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಯಾವುದೆ ಚರ್ಚೆಗಳು ನಡೆದಿಲ್ಲ. ಸಂಪುಟ ಸೇರ್ಪಡೆಗೆ ಬಹಳ ಜನ ಆಕಾಂಕ್ಷಿಗಳಿದ್ದಾರೆ. ಆದರೆ, ಯಾವಾಗ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆ ಅನ್ನೋದು ಗೊತ್ತಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News