ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಆರೋಪಿಯೊಂದಿಗೆ ಪರಾರಿಯಾದ ದುಷ್ಕರ್ಮಿಗಳು
ಗದಗ, ಜೂ.29: ಕಳವು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ಕರೆದೊಯ್ಯುತ್ತಿದ್ದ ಪೊಲೀಸರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಆರೋಪಿ ಪರಾರಿಯಾಗುವಂತೆ ಮಾಡಿದ ಘಟನೆ ನಗರದ ಬೆಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಜಯನಗರದಲ್ಲಿ ನಡೆದಿದ್ದ ಸರಣಿಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜಾಡು ಹಿಡಿದು ಗಂಗಾವತಿ ಶಹರ ಪೊಲೀಸ್ ಠಾಣೆಯ ಪೊಲೀಸರು ನಗರಕ್ಕೆ ಆಗಮಿಸಿದ್ದರು. ಸ್ಥಳೀಯ ಎಸ್.ಎಂ. ಕೃಷ್ಣ ನಗರದಲ್ಲಿ ವಾಸವಿದ್ದ ಅಮ್ಜದ್ ಅಲಿ ಇರಾನಿ ಎಂಬಾತನನ್ನು ವಶಕ್ಕೆ ಪಡೆದು ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಗದಗ ಎಸ್ಪಿ ಬಿ.ಎಸ್.ನೇಮಗೌಡ ಮಾಹಿತಿ ನೀಡಿದ್ದಾರೆ.
ಅಮ್ಜದ್ ಅಲಿಯನ್ನು ಪೊಲೀಸರು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಬೇಟಗೇರಿಯ ರೈಲ್ವೆ ಅಂಡರ್ ಬ್ರಿಡ್ಜ್ ನಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಗಾಜು ಪುಡಿಗಟ್ಟಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿದ್ದ ಆರೋಪಿಯನ್ನು ಕರೆದುಕೊಂಡು ಪರಾರಿಯಾಗಿದ್ದಾರೆ ಎಂದು ಎಸ್ಪಿ ಬಿ.ಎಸ್.ನೇಮಗೌಡ ತಿಳಿಸಿದ್ದಾರೆ.
ಗಾಯಗೊಂಡ ಪೊಲೀಸರನ್ನು ಬೆಟಗೇರಿಯ ಸಿ.ಎಸ್.ಐ. ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಆಸ್ಪತ್ರೆಗೆ ಭೇಟಿ ನೀಡಿ ಪೊಲೀಸರ ಆರೋಗ್ಯ ವಿಚಾರಿಸಿದರು.
ಈ ಬಗ್ಗೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.