ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ | 23 ಆರೋಪಿಗಳಿಗೆ 5 ವರ್ಷ ಜೈಲು, 36 ಲಕ್ಷ ರೂ. ದಂಡ

ಗದಗ : ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ 2017ರಲ್ಲಿ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.
ರಾಜ್ಯವೇ ಬೆಚ್ಚಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ವರ್ಷಗಳ ನಂತರ ಆರೋಪಿಗಳಿಗೆ ಶಿಕ್ಷೆ ಪ್ರಕಟಗೊಂಡಿದೆ. 23 ಆರೋಪಿಗಳಿಗೆ ಐದು ವರ್ಷಗಳ ಕಾಲ ಕಠಿಣ ಶಿಕ್ಷೆ ಜೊತೆಗೆ 36,87,000 ರೂ. ದಂಡ ವಿಧಿಸಲಾಗಿದೆ.
ದಂಡದ ಮೊತ್ತದಲ್ಲಿ ಪೊಲೀಸ್ ಠಾಣೆ ಹಾನಿ ಪರಿಹಾರವಾಗಿ 12,72,000 ರೂ. ನೀಡಲು ಸೂಚನೆ ನೀಡಲಾಗಿದೆ.
ಘಟನೆಯ ಹಿನ್ನಲೆ: 2017ರ ಫೆ.5ರಂದು ಅಕ್ರಮವಾಗಿ ಮರಳು ಸಾಗಿಸುವ ವಾಹನ ತಡೆದು ಚಾಲಕನನ್ನು ಪೊಲೀಸರು ಥಳಿಸಿದ್ದು, ಇದರಿಂದ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದ ಚಾಲಕ ಶಿವಪ್ಪ ಡೋಣಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದ ಎಂದು ಆರೋಪಿಸಿ ಗ್ರಾಮಸ್ಥರು ಆಸ್ಪತ್ರೆಯಿಂದ ಮೃತದೇಹವನ್ನು ತಂದು ಪೊಲೀಸ್ ಠಾಣೆಯ ಮುಂಭಾಗ ಇಟ್ಟು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆಯ ಕಾವು ಹೆಚ್ಚಾಗಿ ರೊಚ್ಚಿಗೆದ್ದ ಜನರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದರು. ಗಲಾಟೆ ವೇಳೆ ಪೊಲೀಸ್ ಠಾಣೆಯಲ್ಲಿದ್ದ ಪೀಠೋಪಕರಣಗಳು, ಪೊಲೀಸ್ ಜೀಪ್, ಹತ್ತಾರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ 112 ಜನರ ಮೇಲೆ ಪ್ರಕರಣ ದಾಖಲಿಸಲಾಗಿತ್ತು. 112 ಜನರ ಪೈಕಿ 8 ಜನರು ಮೃತಪಟ್ಟಿದ್ದು, ಓರ್ವ ಬಾಲಪರಾಧಿ ಇದ್ದ. ಇದರಲ್ಲಿ ಉಳಿದ 103 ಜನರ ಮೇಲೆ ತನಿಖೆ ನಡೆಸಲಾಗಿದ್ದು, ಅದರಲ್ಲಿ 23 ಜನರ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ವರ ಶೆಟ್ಟಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.
ಸದ್ಯ 23 ಜನ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.