ಹಾಸನ | ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಡಿಸಿ ಕಚೇರಿ ಮುಂದೆ ಮಾದಿಗ-ದಲಿತ ಸಂಘಟನೆಗಳಿಂದ ಪ್ರತಿಭಟನೆ

Update: 2024-10-16 16:16 GMT

ಹಾಸನ : ಒಳ ಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪನ್ನು ಕೂಡಲೇ ರಾಜ್ಯ ಸರಕಾರವು ಜಾರಿಗೊಳಿಸಲು ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಹೇಮಾವತಿ ಪ್ರತಿಮೆಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್.ವೃತ್ತದ ಮೂಲಕ ಡಿಸಿ ಕಛೇರಿ ಆವರಣಕ್ಕೆ ಬಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಒಕ್ಕೂಟದ ಮುಖಂಡ ಎಚ್.ಪಿ. ಶಂಕರರಾಜು ಮಾಧ್ಯಮದವರೊಂದಿಗೆ ಮಾತನಾಡಿ, ʼರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಯ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅದೇ ರೀತಿಯಾಗಿ ಹಾಸನ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ವರ್ಷಗಳಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿಗಾಗಿ ಇಡೀ ರಾಜ್ಯದಲ್ಲಿ ಹಲವಾರು ಹೋರಾಟಗಳು ನಡೆದಿದೆ. ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಆದೇಶವನ್ನು ಯತಾವತ್ತಾಗಿ ಜಾರಿಗೊಳಿಸದೆ, ವಿಳಂಬ ನೀತಿಯನ್ನು ಅನುಸರಿಸುತ್ತಿರುವುದರಿಂದ ಬೃಹತ್ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.  ಸರಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಒತ್ತಾಯವನ್ನು ಮಾಡುತ್ತೇವೆʼ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಮಾದಿಗ ದಂಡೋರ ಜಿಲ್ಲಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ಸುರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಲೂರು ವೆಂಕಟಯ್ಯ, ಲೋಕೇಶ್, ಕೃಷ್ಣದಾಸ್, ಕೆ.ಪಿ. ಚಂದ್ರಯ್ಯ, ವೆಂಕಟಯ್ಯ, ಭಾಸ್ಕರ್, ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News