ಯೋಗೇಶ್ವ‌ರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಹಳ ಪ್ರಯತ್ನ ಮಾಡಿದ್ದೇವೆ : ಬೊಮ್ಮಾಯಿ

Update: 2024-10-23 09:29 GMT

 ಬಸವರಾಜ ಬೊಮ್ಮಾಯಿ

ಹಾವೇರಿ : ʼಯೋಗೇಶ್ವ‌ರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಹಳ ಪ್ರಯತ್ನ ಮಾಡಿದ್ದೇವೆ. ಅವರು ಕಾಂಗ್ರೆಸ್ ಸೇರಿರುವುದು ದೊಡ್ಡ ದುರಂತʼ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬುಧವಾರ ಶಿಗ್ಗಾಂವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಚನ್ನಪಟ್ಟಣದಲ್ಲಿ ಕಾಂಗ್ರೆಸ್‌ಗೆ ಯಾರೂ ಅಭ್ಯರ್ಥಿ ಇರಲಿಲ್ಲ. ಅಲ್ಲಿ ಸುಲಭವಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬಹುದು. ಈಗಲೂ ಆ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಭಾವ ಇದೆ. ಹಿಂದೆ ಬಿಜೆಪಿ-ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷಗಳು ಸ್ಪರ್ಧೆ ಮಾಡಿ ತಿಕೋನ ಸ್ಪರ್ಧೆ ಇದ್ದಾಗಲೂ ಕುಮಾರಸ್ವಾಮಿಯವರು ಗೆಲುವು ಸಾಧಿಸಿದ್ದಾರೆ. ಈ ಉಪ ಚುನಾವಣೆಯಲ್ಲಿಯೂ ಜೆಡಿಎಸ್ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆʼ ಎಂದು ಹೇಳಿದರು.

ಯಾವುದೇ ಬಂಡಾಯವಿಲ್ಲ :

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ ಮಾಡುತ್ತೇವೆ. ಮತ್ತು ಸೌಹಾರ್ದಯುತವಾಗಿ ಚುನಾವಣೆ ಮಾಡುತ್ತೇವೆ ಎಂದರು.

ʼಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆʼ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News