ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ ನಿಧನ

Update: 2024-11-21 04:53 GMT

ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ(80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ನಿಧನರಾಗಿದ್ದಾರೆ.

ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಬಲಿಜ ಸಮುದಾಯಕ್ಕೆ ಸೇರಿರುವ ಮನೋಹರ್ ತಹಶೀಲ್ದಾರ್ ಬಿಇ ಮೆಕ್ಯಾನಿಕಲ್ ಪದವೀಧರರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು, ಬಳಿಕ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದಾರೆ.

ಈ ಹಿಂದೆ ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಹಶೀಲ್ದಾರ್ ಅವರು ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ್ದಕ್ಕೆ ಬೇಸತ್ತು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಆ ಬಳಿಕ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.

ಸಾರ್ವಜನಿಕರ ದರ್ಶನಕ್ಕೆ ಅವಕಾಶ

ಮಾಜಿ ಸಚಿವ ಮನೋಹರ ತಹಶೀಲ್ದಾರ ಅವರ ಮೃತದೇಹದ ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 12 ಗಂಟೆಯಿಂದ ಹಾನಗಲ್ಲ ಪಟ್ಟಣದ ಎನ್ಸಿಜೆಸಿ ಮಹಾವಿದ್ಯಾಲಯದ ಆವರಣದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News