ಗಾಝಾ: ಇಸ್ರೇಲ್ ದಾಳಿಯಲ್ಲಿ ಕನಿಷ್ಠ 17 ಮಂದಿ ಮೃತ್ಯು
Update: 2025-04-26 21:08 IST

ಸಾಂದರ್ಭಿಕ ಚಿತ್ರ | PC: PTI
ಗಾಝಾ: ಶುಕ್ರವಾರ ರಾತ್ರಿಯಿಂದ ಗಾಝಾ ಪ್ರದೇಶದಾದ್ಯಂತ ಇಸ್ರೇಲ್ ನ ವೈಮಾನಿಕ ದಾಳಿಯಲ್ಲಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದು ಸುಮಾರು 30 ಮಂದಿ ನಾಪತ್ತೆಯಾಗಿರುವುದಾಗಿ ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ಶನಿವಾರ ಹೇಳಿದೆ.
ಗಾಝಾ ನಗರದ ಹೊರವಲಯದ ಸಬ್ರಾ ಪ್ರದೇಶದಲ್ಲಿ ಮನೆಯೊಂದನ್ನು ಗುರಿಯಾಗಿಸಿ ನಡೆದ ಕ್ಷಿಪಣಿ ದಾಳಿಯಲ್ಲಿ ಮನೆ ಸಂಪೂರ್ಣ ನೆಲಸಮಗೊಂಡಿದ್ದು ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದಾರೆ. ಅವಶೇಷಗಳಡಿ ಹಲವರು ಸಿಲುಕಿರುವ ವರದಿಯಿದೆ. ಸುಮಾರು 30 ಮಂದಿ ನಾಪತ್ತೆಯಾಗಿದ್ದು ಕಲ್ಲು ಮಣ್ಣಿನ ರಾಶಿಗಳನ್ನು ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಅಲ್-ಶಟಿ ನಿರಾಶ್ರಿತರ ಶಿಬಿರದಲ್ಲಿನ ಮನೆಯೊಂದರ ಮೇಲೆ ಇಸ್ರೇಲ್ ನಡೆಸಿದ ಶೆಲ್ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮತ್ತೊಂದು ಪ್ರತ್ಯೇಕ ದಾಳಿಯಲ್ಲಿ 4 ಮಂದಿ ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ.