ಸಿಂಗಾಪುರ ಪ್ರಧಾನಿ ವಾಂಗ್ ರನ್ನು ಭೇಟಿಯಾದ ಪ್ರಧಾನಿ ಮೋದಿ
ಸಿಂಗಾಪುರ : ಗುರುವಾರ ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ರೊಂದಿಗೆ ಫಲಪ್ರದ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಈ ಮಾತುಕತೆಯ ಸಂದರ್ಭದಲ್ಲಿ ದ್ವಿಪಕ್ಷೀಯ ಒಪ್ಪಂದಗಳನ್ನು ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯನ್ನಾಗಿ ಮೇಲ್ದರ್ಜೆಗೇರಿಸಿದರು.
ವಾಂಗ್ ಅವರ ಆಮಂತ್ರಣದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಸಿಂಗಾಪುರಕ್ಕೆ ಭೇಟಿ ನೀಡಿದ್ದಾರೆ.
ವಾಂಗ್ ಅವರೊಂದಿಗೆ ಮಾತುಕತೆ ಪ್ರಾರಂಭವಾಗುವುದಕ್ಕೂ ಮುನ್ನ, ನರೇಂದ್ರ ಮೋದಿ ಅವರಿಗೆ ಸಿಂಗಾಪುರ ಸಂಸತ್ ಭವನದಲ್ಲಿ ಕೆಂಪುಹಾಸಿನ ಸ್ವಾಗತ ನೀಡಲಾಯಿತು. ಅಲ್ಲಿನ ಸಂದರ್ಶನಕಾರರ ಪುಸ್ತಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿಯನ್ನೂ ಮಾಡಿದರು.
ಸಭೆಯ ನಂತರ ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಬಾಂಧವ್ಯದಲ್ಲಿ ಹೊಸ ಅಧ್ಯಾಯ: ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆ ಸ್ಥಾಪನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರೊಂದಿಗೆ ಫಲಪ್ರದ ಸಭೆ ನಡೆಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.