ಕಲಬುರಗಿಯನ್ನು ಸ್ಮಾರ್ಟ್ ಸಿಟಿ ಮಾಡಲು 1,685 ಕೋಟಿ ರೂ. : ಸಿಎಂ ಸಿದ್ದರಾಮಯ್ಯ

Update: 2024-09-17 13:55 GMT

Screengrab : x/@siddaramaiah

ಕಲಬುರಗಿ : ರಾಜ್ಯ ಸರಕಾರದ ವತಿಯಿಂದಲೇ ಸುಮಾರು 1,685 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಯೋಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳವಾರ ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ಅಂಗವಾಗಿ ಕಲಬುರಗಿಯ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.

ಹಿಂದುಳಿದ ಜಿಲ್ಲೆಗಳಲ್ಲಿ ಹೂಡಿಕೆಯನ್ನು ಆಕರ್ಷಿಸುವುದಲ್ಲದೆ ಇಲ್ಲಿನ ನಗರ ವಾಸಿಗಳ ಜೀವನ ಗುಣಮಟ್ಟ ಹೆಚ್ಚಿಸುವ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸಲು ಇದು ಸಹಕಾರಿಯಾಗಲಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ತಲಾ 200 ಕೋಟಿ ರೂ. ಗಳನ್ನು ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಹಾಗೂ ಗುಣಾತ್ಮಕವಾಗಿ ಅಭಿವೃದ್ಧಿ ಪಡಿಸಲು ಹಾಗೂ ಸಮಗ್ರ ಗ್ರಾಮೀಣಾಭಿವೃದ್ಧಿ ಮಾಡುವ ಧ್ಯೇಯದೊಂದಿಗೆ “ಕಲ್ಯಾಣ ಪಥ” ಯೋಜನೆಯನ್ನು ರೂಪಿಸಲಾಗಿದೆ. ಈ ಭಾಗದ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಸರಕಾರ 1,000 ಕೋಟಿ ರೂ. ವೆಚ್ಚದಲ್ಲಿ 1,150 ಕಿ.ಮೀ. ರಸ್ತೆಗಳನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಯಚೂರಿನಲ್ಲಿ ಏಮ್ಸ್ ಸಂಸ್ಥೆಯನ್ನು ಸ್ಥಾಪಿಸಲು ನಮ್ಮ ಸರಕಾರ ಅಗತ್ಯವಿರುವ ಎಲ್ಲ ನೆರವನ್ನು ಒದಗಿಸಲಿದೆ. ಶಹಾಪುರದಲ್ಲಿ 292 ಕೋಟಿ ರೂ.ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಿಸುತ್ತಿದ್ದೇವೆ. ಇದರ ಜೊತೆಗೆ 23 ಕೋಟಿ ರೂ. ಮೊತ್ತದಲ್ಲಿ ಸಿಂಧನೂರಿನಲ್ಲಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ಮಾಡುತ್ತೇವೆ ಎಂದು ಅವರು ಹೇಳಿದರು.

ಪ್ರಸಕ್ತ ಸಾಲಿನಲ್ಲಿ ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ಘಟಕಗಳನ್ನು ಸ್ಥಾಪಿಸಲಾಗುವುದು. ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ. ಗಳನ್ನು ಒದಗಿಸಲಾಗುವುದು. ಬಳ್ಳಾರಿಯಲ್ಲಿ ಅಸಂಘಟಿತವಾಗಿರುವ ಜೀನ್ಸ್ ಉದ್ದಿಮೆಗಳನ್ನು ಸಂಘಟಿಸಿ, ವಿಶ್ವದರ್ಜೆಗೆ ಉನ್ನತೀಕರಿಸಲು ಮೂಲ ಸೌಕರ್ಯಗಳನ್ನು ಒಳಗೊಂಡಂತೆ ಜೀನ್ಸ್ ಅಪರೆಲ್ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ ವ್ಯಾಪ್ತಿಯ 18 ಹೊಸ ತಾಲೂಕುಗಳಲ್ಲಿ ಕಂದಾಯ ಇಲಾಖೆ ಮತ್ತು ಕೆಕೆಆರ್‍ಡಿಬಿ ಸಹಭಾಗಿತ್ವದಲ್ಲಿ ‘ತಾಲೂಕು ಆಡಳಿತ ಭವನ’ಗಳನ್ನು 130 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಬೀದರ್ ಜಿಲ್ಲೆಯ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸಂರಕ್ಷಣಾತ್ಮಕ ಕಾರ್ಯಕ್ರಮಕ್ಕೆ ಕೆ.ಕೆ.ಆರ್.ಡಿ.ಬಿ. ವತಿಯಿಂದ 15 ಕೋಟಿ ರೂ. ಅನುದಾನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಅಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ 397 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. 140 ಕೋಟಿ ರೂ. ವೆಚ್ಚದಲ್ಲಿ ಸೇಡಂ ತಾಲೂಕಿನ ಯಡ್ಡಳ್ಳಿ-ಕಾಚೂರು ಏತ ನೀರಾವರಿ ಯೋಜನೆಗೆ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೆ ಕೆಲಸ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಯಚೂರಿನಲ್ಲಿ ನೂತನ ಜವಳಿ ಪಾರ್ಕನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು. ಕಲಬುರಗಿಯಲ್ಲಿ ಬಸವಣ್ಣ ಹಾಗೂ ಇತರ ಶರಣರ ವಚನಗಳನ್ನು ವಿಶ್ವಕ್ಕೆ ಪರಿಚಯಿಸುವ ವಚನ ಸಂಗ್ರಹಾಲಯ/ವಚನ ಮಂಟಪವನ್ನು ಸ್ಥಾಪಿಸಲಾಗುವುದು. ಮುಂದಿನ ವರ್ಷದ ಅಂತ್ಯಕ್ಕೆ ಅನುಭವ ಮಂಟಪ ಉದ್ಘಾಟನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಬೀದರ್‌ನಲ್ಲಿರುವ ಶ್ರೀ ಗುರು ನಾನಕ್ ಝರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ 1 ಕೋಟಿ ರೂ. ಅನುದಾನ ನೀಡಲಾಗುವುದು. ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಬಳ್ಳಾರಿ ಸೇರಿ ರಾಜ್ಯದ ಐದು ಕಡೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಒಟ್ಟು 50 ಕೋಟಿ ರೂ. ವೆಚ್ಚದಲ್ಲಿ ಹಾಗೂ ರಾಯಚೂರಿನಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಶೀತಲಗೃಹಗಳನ್ನು ನಿರ್ಮಿಸಲಾಗುವುದು. ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆಯನ್ನು ಅಂದಾಜು 25 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News