ಕಲಬುರಗಿ | ನಾಳೆ(ನ.23) ನಗರ ಸ್ಥಳೀಯ ಸಂಸ್ಥೆ, ಗ್ರಾ.ಪಂ ಉಪಚುನಾವಣೆ : ಪ್ರತಿಬಂಧಕಾಜ್ಞೆ ಜಾರಿ

Update: 2024-11-22 06:34 GMT

 ಬಿ. ಫೌಝಿಯಾ ತರನ್ನುಮ್

ಕಲಬುರಗಿ : ವಿವಿಧ ಕಾರಣಗಳಿಂದ ತೆರವಾಗಿರುವ ಕಲಬುರಗಿ ನಗರ ಸ್ಥಳೀಯ ಸಂಸ್ಥೆಗಳ ಮತ್ತು ಗ್ರಾಮ ಪಂಚಾಯತಿ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ನಾಳೆ (ನ.23 ರಂದು) ಮತದಾನ ನಡೆಯಲಿದೆ.

ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಉಪಚುನಾವಣೆ ನಡೆಯಲಿರುವ ಮತಗಟ್ಟೆಗಳ 200 ಮೀಟರ್ ಸುತ್ತಲೂ ನ.23ರ ಬೆಳಿಗ್ಗೆ 6 ರಿಂದ ನ.24ರ ಬೆಳಿಗ್ಗೆ 6 ಗಂಟೆಯವರೆಗೆ 2023 ಬಿ.ಎನ್.ಎಸ್.ಎಸ್ ಸೆಕ್ಷನ್ 163 ರನ್ವಯ ಕೆಳಕಂಡ ಷರತ್ತುಗಳನ್ನು ವಿಧಿಸಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.

ಈ ಉಪ ಚುನಾವಣೆ ಜರುಗಲಿರುವ ಪ್ರದೇಶ/ಟೌನ/ವಾರ್ಡ್ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ-ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಿದೆ. 

ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.

ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು, ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿದ್ದು, ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು, ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುತ್ತದೆ.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೇರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಪಾಲಿಸಬೇಕು.

ಮತಗಟ್ಟೆಗಳ ಸುತ್ತ 200 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ/ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು/ ಸಿಬ್ಬಂದಿಗಳು ಹೊರತುಪಡಿಸಿ) ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್/ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News