ಕಲಬುರಗಿ | ಎಚ್ ಕೆಇ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ 67 ವಿದ್ಯಾರ್ಥಿನಿಯರು ಕ್ಯಾಂಪಸ್ ಆಯ್ಕೆ
ಕಲಬುರಗಿ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಪರ್ಸೋಲಕೆಲ್ಲಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಕ್ಯಾಂಪಸ್ ಸಂದರ್ಶನದಲ್ಲಿ 67 ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.
ಕ್ಯಾಂಪಸ್ ಸಂದರ್ಶನದಲ್ಲಿ ಕಾಲೇಜಿನ 108 ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಸುಮಾರು 67 ವಿದ್ಯಾರ್ಥಿನಿಯರು ಆಯ್ಕೆಯಾಗುವುದರೊಂದಿಗೆ ಐತಿಹಾಸಿಕ ಸಾಧನೆಗೈದರು. ಪರ್ಸೋಲಕೆಲ್ಲಿ ಇದು ಇಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಪ್ರಸಿದ್ಧಿ ಪಡೆದ ಪ್ರತಿಷ್ಠಿತ ಕಂಪನಿಯಾಗಿದೆ. ಆಯ್ಕೆಗೊಂಡ ಕಾಲೇಜಿನ ವಿದ್ಯಾರ್ಥಿನಿಯರು ಕೋಲಾರ ಜಿಲ್ಲೆಯ ನರಸಾಪುರದಲ್ಲಿ ಕಾರ್ಯನಿರ್ವಹಿಸಲು ಆಯ್ಕೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.
ಆಯ್ಕೆಗೊಂಡ ಎಲ್ಲಾ ವಿದ್ಯಾರ್ಥಿನಿಯರನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿಯವರು ಅಭಿನಂದಿಸಿ ಶುಭ ಹಾರೈಸಿದರು.
ಸಂಸ್ಥೆಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ ಮಾತನಾಡಿ, ನಮ್ಮ ಸಂಸ್ಥೆಯ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ 67 ವಿದ್ಯಾರ್ಥಿನಿಯರು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗುವದರೊಂದಿಗೆ ನಮ್ಮ ಸಂಸ್ಥೆಗೆ ಗೌರವ ತಂದಿದ್ದಾರೆ. ಇಷ್ಟೋಂದು ದೊಡ್ಡ ಸಂಖ್ಯೆಯಲ್ಲಿ ಆಯ್ಕೆಯಾಗುವುದಕ್ಕೆ ಅಲ್ಲಿನ ಸಿಬ್ಬಂದಿಗಳ ಕಾರ್ಯಕ್ಷಮತೆ ಬಗ್ಗೆ ಕೊಂಡಾಡಿದರು. ಸಂಸ್ಥೆಯು ಯಾವಾಗಲೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಹೇಳಿದರು.
ಕಾಲೇಜಿನ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಡಾ.ಮಹಾದೇವಪ್ಪ ರಾಂಪೂರೆ ಮಾತನಾಡಿ, ನಮ್ಮ ಸಂಸ್ಥೆಯು ಯಾವಾಗಲೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ.ಭೀಮಳ್ಳಿ, ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಪಾಲಿಟೆಕ್ನಿಕ್ ಕಾಲೇಜಿನ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಡಾ.ಮಹಾದೇವಪ್ಪ ರಾಂಪೂರೆ, ಅರುಣಕುಮಾರ ಪಾಟೀಲ್, ಸಾಯಿನಾಥ ಪಾಟೀಲ್, ನಾಗಣ್ಣ ಘಂಟಿ ಹಾಗೂ ಕಾಲೇಜಿನ ಪ್ರಾಚಾರ್ಯರಾದ ಎನ್.ಜಿ.ಪಾಟೀಲ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.