ಕಲಬುರಗಿ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ
ಕಲಬುರಗಿ : ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಜಲ್ಲಾ ಸಮಿತಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ಮಂಗಳವಾರ ಆರಂಭಿಸಿದ್ದಾರೆ.
ಸಿಐಟಿಯು ಜಲ್ಲಾ ಸಮಿತಿ ಕಾರ್ಯಾಧ್ಯಕ್ಷೆ ಶಾಂತಾ ಘಂಟಿ, ಜಿಲ್ಲಾಧ್ಯಕ್ಷೆ ಗೌರಮ್ಮ ಪಾಟೀಲ್ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಸುಮಾರು 2-3 ಸಾವಿರಕ್ಕೂ ಅಧಿಕ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಕಾಯಂ ಮಾಡಬೇಕು, ಐಸಿಡಿ 2023ರ ಆದೇಶದ ಪ್ರಕಾರ ಕೂಡಲೇ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿ ಮತ್ತು ಎಲ್ಲರಿಗೂ ಅನ್ವಯಿಸಿಸಬೇಕು, 2018 ರಿಂದ ಕೇಂದ್ರ ಸರಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲ. ಕೂಡಲೇ ಕೇಂದ್ರ ಸರಕಾರವು 26 ಸಾವಿರ ಗೌರವಧನ ಹೆಚ್ಚಿಸಬೇಕು, 2023ರ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಘೋಷಣೆ ಮಾಡಿದ 15 ಸಾವಿರ ರೂ.ಗಳಿಗೆ ಗೌರವಧನ ಹೆಚ್ಚಿಸಬೇಕು, ನಿವೃತ್ತಿಯಾದವರಿಗೆ ಇಡಿಗಂಟು ಅಥವಾ ಎನ್ಪಿಎಸ್ ಹಣವನ್ನು ಹಾಗೂ 10 ಸಾವಿರ ಮಾಸಿಕ ಪಿಂಚಣಿಯನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇಲಾಖೆ ಸಚಿವರು ಒಪ್ಪಿಕೊಂಡoತೆ ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ ಜಾರಿಗೊಳಿಸಬೇಕು, ಅಂಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿಎಸ್ಟಿ ಹಾಕಬಾರದು, ಘಟಕ ವೆಚ್ಚ ಹೆಚ್ಚಳ ಮಾಡಿ ಹಿಂದಿನಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೆನು ಅಂತಿಮಗೊಳ್ಳವ ವ್ಯವಸ್ಥೆ ಜಾರಿಯಾಗಬೇಕು ಎಂದರು.
ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಕರ್ಯಗಳನ್ನು ನೀಡಬೇಕು, ಖಾಲಿ ಹುದ್ದೆಗಳಿಗೆ 3 ತಿಂಗಳೊಳಗೆ ನೇಮಕಾತಿಯಾಗಬೇಕು, ಸಹಾಯಕಿ ಇಲ್ಲದ ಅಂಗನವಾಡಿ ಕೇಂದ್ರಗಳಲ್ಲಿ ಟೇಕ ಹೋಮ ಕೊಡಬೇಕು. ಇಲ್ಲದಿದ್ದರೆ ತಾತ್ಕಾಲಿಕ ಸಹಾಯಕಿಯನ್ನು ನೇಮಾಕಾತಿ ಮಾಡಿಕೊಳ್ಳುವ ಅಧಿಕಾರ ಕಾರ್ಯಕರ್ತೆಗೆ ಕೊಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಂ.ಬಿ.ಸಜ್ಜನ್, ರಾಜಮತಿ, ಶೇಖಮ್ಮ, ಜಾವೀದ್ ಹುಸೇನ್, ಶರಣಬಸಪ್ಪ ಮಮಶೆಟ್ಟಿ, ಶ್ರೀಮಂತ ಬಿರಾದರ್, ಮಹ್ಮದ್ ಮಕಾದ್ದಮ್, ಶಂಕ್ರಯ್ಯ ಘಂಟಿ, ದೀಲಿಪ ನಾಗೂರೆ, ನಾಗಯ್ಯ ಸ್ವಾಮಿ ಸೇರಿದಂತೆ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.