ಕಲಬುರಗಿ | ಅಮಿತ್ ಶಾ, ಸಿ.ಟಿ.ರವಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಕಲಬುರಗಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾಹ ಮತ್ತು ಬೆಳಗಾವಿ ಸದನದಲ್ಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಆಳಂದ ಪಟ್ಟಣದ ಬಸ್ ನಿಲ್ದಾಣ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಆಳಂದ ಪಟ್ಟಣದ ಬಸ್ ನಿಲ್ದಾಣ ಮುಂದೆ ಆಳಂದ ಮತ್ತು ಮಾದನಹಿಪ್ಪರಗಾ ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಂದ ಪ್ರತಿಭಟನೆ ನಡೆಸಿ ಇಬ್ಬರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ ಕಲಾಪದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿದ ಜಿಪಂ ಮಾಜಿ ಸದಸ್ಯ ಸಿದ್ಧರಾಮ ಪ್ಯಾಟಿ ಅವರು, ಅಮಿತ ಶಾ ಕೂಡಲೇ ದೇಶಕ್ಕೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಆಗಿರುವ ಮಾಜಿ ಸಚಿವ ಸಿ.ಟಿ.ರವಿ ಅವರು ಅವಮಾನಕರ ಹೇಳಿಕೆ ನೀಡಿದ್ದು ಸರಿಯಲ್ಲ. ಕೂಡಲೇ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾದನಹಿಪ್ಪರಗಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಗೌಡ ಪಾಟೀಲ್, ಆಳಂದ ಎಸ್ಸಿ ಮೋರ್ಚಾ ಅಧ್ಯಕ್ಷ ಸುಭಾಷ ಪವಾರ, ಮುಖಂಡ ಸುಭಾಷ ಫೌಜಿ, ಪಂಡಿತ ಶೇರಿಕಾರ, ಶರಣಬಸಪ್ಪ ಪಾಟೀಲ, ಗುರು ಪಾಟೀಲ ಹಳ್ಳಿಸಲಗರ, ಶಿವಾಜಿ ರಾಠೋಡ, ಪುರಸಭೆ ಸದಸ್ಯ ಈರಣ್ಣಾ ಹತ್ತರಕಿ, ನ್ಯಾಯವಾದಿ ಸಂಜಯ ನಾಯಕ, ಅಮ್ಜದ್ ಅಲಿ ಖರ್ಜಗಿ, ಶಿವು ಪಾಟೀಲ, ಮಲ್ಲಿಕಾರ್ಜುನ ಮತ್ತಿತರು ಭಾಗವಹಿಸಿದ್ದರು.
ಅಮಿತ್ ಶಾ ವಿರುದ್ಧ ರಾಷ್ಟಪತಿಗಳಿಗೆ ಹಾಗೂ ಸಿ.ಟಿ. ರವಿ ವಿರುದ್ಧ ರಾಜ್ಯಪಾಲರಿಗೆ ಮನವಿಯನ್ನು ಘಟನಾ ಸ್ಥಳಕ್ಕೆ ಆಗಮಿಸಿದ್ದ ಗ್ರೇಡ್-2 ತಹಶೀಲ್ದಾರ್ ಬಿ.ಜಿ.ಕುದರಿ ಅವರಿಗೆ ಸಲ್ಲಿಸಿ ಪ್ರತಿಭಟನೆ ಹಿಂದಕ್ಕೆ ಪಡೆದರು. ಪಿಐ ಶರಣಬಸಪ್ಪ ಕೊಡ್ಲಾ ಅವರು ಭದ್ರತೆ ಒದಗಿಸಿ ವಾಹನ ಸಂಚಾರಕ್ಕೆ ಅನುವುಮಾಡಿಕೊಟ್ಟರು.