ಕಲಬುರಗಿ | ಜ.6ರಿಂದ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ನಿರ್ಧಾರ : ಬಿ.ಫೌಝಿಯಾ ತರನ್ನುಮ್
ಕಲಬುರಗಿ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಪ್ರಸಕ್ತ 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ರೈತರಿಂದ ಖರೀದಿಸಲು ನಿರ್ಧರಿಸಿಲಾಗಿದೆ.
ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ 177 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ರೈತ ಉತ್ಪಾದಕ ಸಂಘಗಳಲ್ಲಿ ಬರುವ ಜ.6 ರಿಂದ 75 ದಿನಗಳವರೆಗೆ ತೊಗರಿ ಖರೀದಿಗೆ ನೊಂದಣಿ ಮತ್ತು ಜೊತೆ ಜೊತೆಗೆ 90 ದಿನಗಳವರೆಗೆ ಖರೀದಿ ಪ್ರಕ್ರಿಯೆ ಕೈಗೊಳ್ಳಲು ತೀರ್ಮಾನ ಕೈಗೊಳ್ಳಲಾಗಿದೆ.
ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್ ತೊಗರಿಗೆ 7,550 ರೂ. ನಿಗದಿ ಮಾಡಲಾಗಿದ್ದು, ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಖರೀದಿಸಲಾಗುತ್ತದೆ. ಹಣವನ್ನು ಡಿ.ಬಿ.ಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಡಿ.ಸಿ. ಬಿ.ಫೌಝಿಯಾ ತರನ್ನುಮ್ ತಿಳಿಸಿದ್ದಾರೆ.
ಇನ್ನು ತೊಗರಿ ಖರೀದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ನೋಡಲ್ ಏಜೆನ್ಸಿಗಳನ್ನಾಗಿ ನೇಮಿಸಿದ್ದು, ರೈತ ಬಾಂಧವರು ಇದರ ಲಾಭ ಪಡೆಯಬೇಕೆಂದು ಡಿ.ಸಿ. ಮನವಿ ಮಾಡಿದ್ದಾರೆ.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.