ಕಲಬುರಗಿ | ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ರೈತರ ಒತ್ತಾಯ
ಕಲಬುರಗಿ : ʼಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒಡೆತನದ ಚಿಂಚೋಳಿಯ ಸಿದ್ದಸಿರಿ ಸಕ್ಕರೆ ಕಾರ್ಖಾನೆ ಪುನರ್ ಆರಂಭಿಸಬೇಕು, ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದುʼ ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಜಗದೀಶ ಪಾಟೀಲ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ʼ ಕಲಬುರಗಿ ಜಿಲ್ಲೆಯ ಚಿಂಚೋಳಿ, ಚಿತ್ತಾಪುರ, ಸೇಡಂ, ಕಾಳಗಿ ಮತ್ತು ಕಮಲಾಪುರ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ರೈತರಿಗೆ ಸಹಕಾರವಾಗಲಿರುವ ಚಿಂಚೋಳಿ ಸಿದ್ದಸಿರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸದೆ, ರಾಜ್ಯ ಸರಕಾರ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಇದರಿಂದ ಕಬ್ಬು ಬೆಳಗಾರರಿಗೆ ಭಾರೀ ಸಮಸ್ಯೆ ಉಂಟಾಗುತ್ತಿದ್ದು, ಸರಕಾರ ಕೂಡಲೇ ಪಕ್ಷಭೇದ ಮರೆತು ರೈತರ ಒಳಿತಿಗಾಗಿ ಕಾರ್ಖಾನೆ ಆರಂಭಕ್ಕೆ ಅನುಮತಿ ನೀಡಬೇಕುʼ ಎಂದು ಆಗ್ರಹಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಈಶ್ವರ್ ಖಂಡ್ರೆ ಅವರು ಸರಕಾರದ ಮೇಲೆ ಒತ್ತಡ ತಂದು ಕಾರ್ಖಾನೆ ಆರಂಭಕ್ಕೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು. ನ.1ರ ಒಳಗಾಗಿ ಕಾರ್ಖಾನೆ ಆರಂಭಿಸದಿದ್ದರೆ, ನ.4ರಿಂದ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ನಿರಂತರ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಧರ್ಮರಾಜ್ ಸಾಹು, ಮುಖಂಡರಾದ ಬಸವರಾಜ್ ಪಾಟೀಲ್, ಶಾಂತವೀರ ದಸ್ತಾಪುರ್, ಶಾಂತವೀರಪ್ಪ ಹೆಬ್ಬಾಳ, ಕರಬಸಪ್ಪ ಉಜ್ಜಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.