ಕಲಬುರಗಿ | ಪಂಚ ಗ್ಯಾರಂಟಿ ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯ ಸರ್ಕಾರವು ಶಕ್ತಿ, ಅನ್ನ ಭಾಗ್ಯ, ಗೃಹ ಲಕ್ಷ್ಮಿ, ಗೃಹ ಜ್ಯೋತಿ ಹಾಗೂ ಯುವನಿಧಿ ಈ ಐದು ಗ್ಯಾರಂಟಿ ಯೋಜನೆಗಳನ್ನು ಯಶ್ವಸಿಯಾಗಿ ರಾಜ್ಯಾದ್ಯಂತ ಅನುಷ್ಠಾನಗೊಳಿಸಿದ್ದು, ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಹೊರತರಲಾದ ಜಿಲ್ಲಾ ಮಟ್ಟದಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತಾಗಿ ಸಮಗ್ರ ಮಾಹಿತಿಯನ್ನು ಒಳಗೊಂಡ ಕಿರು ಹೊತ್ತಿಗೆಯನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಡುಗಡೆ ಮಾಡಿದರು.
ಸೋಮವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ ಸಮಾರಂಭದಲ್ಲಿ "ಪಂಚ ಗ್ಯಾರಂಟಿ" ಯೋಜನೆ - ಕಲಬುರಗಿ ಜಿಲ್ಲಾ ಪ್ರಗತಿ ಕಿರಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಈ ಕಿರು ಪುಸ್ತಕವು ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಯಶೋಗಾಥೆ, ಅನಿಸಿಕೆ ಸೇರಿದಂತೆ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸಮಗ್ರ ಚಿತ್ರಣವನ್ನು ಕಟ್ಟಿಕೊಡುವಂತೆ ರೂಪಿಸಲಾಗಿರುವುದು ಪ್ರಶಂಸನೀಯವಾಗಿದೆ ಎಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಣೆ :
ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2024-25ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆ ಅಡಿಯಲ್ಲಿ ಜಿಲ್ಲೆಯ 8 ಪರಿಶಿಷ್ಟ ಜಾತಿ ಹಾಗೂ ಓರ್ವ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಲ್ಯಾಪ್ ಟಾಪ್ ಮತ್ತು ಕ್ಯಾಮರಾ ಒಳಗೊಂಡ ಮೀಡಿಯಾ ಕಿಟ್ ಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಗಣ್ಯರು ವಿತರಿಸಿದರು.
ಗ್ರಾಮೀಣ ಭಾಗದಲ್ಲಿ ಅರಿವು ಕೇಂದ್ರ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅರಿವು ಕೇಂದ್ರಗಳಿಗೆ ಹೊಸದಾಗಿ ನೇಮಕಗೊಂಡ 39 ಗ್ರಂಥಾಲಯ ಮೇಲ್ವಿಚಾರಕರ ಪೈಕಿ 35 ಜನರಿಗೆ ಇಂದಿಲ್ಲಿ ನೇಮಕಾತಿ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ, ಕರ್ನಾಟಕ ರೇಷ್ಮೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ ಪಾಟೀಲ, ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ, ಜಿಲ್ಲಾ ಕೇಂದ್ರ ಗ್ರಂಥಾಲಯದ ಅಧಿಕಾರಿ ಪರಮೇಶ್ವರ ಇದ್ದರು.