ಕಲಬುರಗಿ | ವಕ್ಫ್ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ : ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ವಕ್ಫ್ ಕಾಯಿದೆಯನ್ನು ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಘಟಕ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಕ್ಫ್ ಕಾಯಿದೆಯಲ್ಲಿ ಮಾಡಲಾಗಿರುವ ತಿದ್ದುಪಡಿ ಪ್ರಸ್ತಾವನೆಗಳು ಸಂವಿಧಾನಬದ್ಧ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಮತ್ತು ಧಾರ್ಮಿಕ ಸಂಸ್ಥೆಗಳ ಸ್ವಾಯತ್ತತೆಗೆ ಧಕ್ಕೆಯಾಗಿದೆ. ಪ್ರಜಾಪ್ರಭುತ್ವ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕೆ ವಿರೋಧವಾಗಿರುವ ಈ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಭಾರತೀಯ ಸಂವಿಧಾನದ ವಿಧಿ 25 ಮತ್ತು 26ರ ಅಡಿಯಲ್ಲಿ ಖಚಿತಪಡಿಸಲಾದ ಧಾರ್ಮಿಕ ಸ್ವಾತಂತ್ರ್ಯವನ್ನು ಕಾಯ್ದುಕೊಳ್ಳಬೇಕು, ಯಾವುದೇ ಧಾರ್ಮಿಕ ಸಮುದಾಯದ ಆಂತರಿಕ ವಿಷಯಗಳಲ್ಲಿ ಸರ್ಕಾರ ಹಸ್ತಕ್ಷೇಪಿಸಬಾರದು, ವಕ್ಫ್ ಬೋರ್ಡ್ ನ ಸ್ವಾಯತ್ತತೆ ಮತ್ತು ಆಸ್ತಿ ನಿರ್ವಹಣೆಯಲ್ಲಿ ಪಾರದರ್ಶಕತೆ ಖಚಿತಪಡಿಸಬೇಕೆಂದು ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಒತ್ತಾಯಿಸಿದರು.
ರಾಜ್ಯ ಕಾರ್ಯದರ್ಶಿ ಮುಬೀನ್ ಅಹಮದ್, ವೆಲ್ಫೇರ್ ಪಾರ್ಟಿ ಜಿಲ್ಲಾಧ್ಯಕ್ಷ ಸಲೀಂ ಚಿತಾಪುರಿ, ಜಿಲ್ಲಾ ಉಪಾಧ್ಯಕ್ಷ ಬಾಬಾ ಹುಂಡೇಕರ್ , ಜಿಲ್ಲಾ ಯುವ ಘಟಕದ ಅಧ್ಯಕ್ಷ, ಫಹದ್ ಮೊಹಸಿನ್, ಹೈದರ್ ಅಲಿ ಬಾಗ್ಬಾನ್, ಮುಬಾಶ್ಶಿರ್, ಜಾಕಿರ್ ಹುಸೇನ್ ಸಾಬ್, ಹಾರೂನ್ ಖಾರಡಿ ಮತ್ತು ಇತರ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.