ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 35 ವರ್ಷ ಜೈಲು

ಕಲಬುರಗಿ : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವೊಂದು ಸಾಬೀತು ಆಗಿದ್ದ ಹಿನ್ನೆಲೆಯಲ್ಲಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಆರೋಪಿಗೆ 35 ವರ್ಷ ಜೈಲು ಶಿಕ್ಷೆ ವಿಧಿಸಿ, ಆದೇಶ ಹೊರಡಿಸಿದ್ದಾರೆ.
ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ಕುರುಬೂರ ಗ್ರಾಮದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ ನಾಗೇಂದ್ರ ನಾರಾಯಣಸ್ವಾಮಿ (25) ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ.
ನಾಗೇಂದ್ರನು, ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದೇ ವೇಳೆಯಲ್ಲಿ ಹೋಟೆಲ್ ಒಂದರಲ್ಲಿ 16 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆಕೆಯನ್ನು ಪ್ರೀತಿಸುವುದಾಗಿ ಹೇಳಿ ತನ್ನ ಸ್ವಗ್ರಾಮದ ಮನೆಗೆ ಕರೆದೊಯ್ದು, ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಇಲ್ಲಿನ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯಾದ ಪಿಐ ಸುಶೀಲಕುಮಾರ ಅವರು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ವಾದ-ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ವಿಶೇಷ ಪೋಕ್ಸ್) ಎಫ್‌ಟಿಎಸ್‌ಸಿ-1 ನ್ಯಾಯಾಧೀಶರು, ನಾಗೇಂದ್ರಗೆ ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ 35 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ, ಆದೇಶ ಪ್ರಕಟಿಸಿದ್ದಾರೆ. ಅಲ್ಲದೆ, ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 5 ಲಕ್ಷ ರೂ.ವನ್ನು ಒಂದು ತಿಂಗಳ ಒಳಗೆ ಪರಿಹಾರವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.