ಬೆಳಗಾವಿ, ಕಲಬುರಗಿ ವಿಭಾಗದ ಸರಕಾರಿ ಕಚೇರಿಗಳ ಸಮಯ ಕಡಿತಗೊಳಿಸಿ ಸರಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬೆಳಗಾವಿ ವಿಭಾಗದ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಅನ್ವಯವಾಗುವಂತೆ ಸರಕಾರಿ ಕಚೇರಿಗಳ ಸಮಯವನ್ನು ಮಧ್ಯಾಹ್ನದವರೆಗೆ ನಿಗಧಿಪಡಿಸಲಾಗಿದೆ.
ಬುಧವಾರದಂದು ಸರಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಆದೇಶ ಹೊರಡಿಸಿದ್ದು, ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಹೀಗಾಗಿ ಬೆಳಗಾವಿ ವಿಭಾಗದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳ ಸರಕಾರಿ ಕಚೇರಿಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30ಗಂಟೆಯವರೆಗೆ ಕಾರ್ಯ ನಿರ್ವಹಿಸಬೇಕು ಎಂದಿದ್ದಾರೆ.
ಈ ಜಿಲ್ಲೆಗಳ ಸರಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪವಿಲ್ಲದೆ, ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲವಾಗದಂತೆ ಕಾರ್ಯ ನಿರ್ವಹಿಸಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‍ನ ಕಾರ್ಯನಿರ್ವಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ನೌಕರರು ಸಮಯದ ಪರಿಮಿತಿಯಿಲ್ಲದೆ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.