ಮೋದಿ ತಮ್ಮ ʼಗ್ಯಾರಂಟಿʼ ಏನು ಎಂಬುದನ್ನು ಮೊದಲು ಜನರಿಗೆ ತಿಳಿಸಲಿ : ಮಲ್ಲಿಕಾರ್ಜುನ ಖರ್ಗೆ

Update: 2024-04-12 10:42 GMT

ಕಲಬುರಗಿ : ಮೋದಿಯವರು ತಮ್ಮ ʼಗ್ಯಾರಂಟಿʼ ಏನು ಎಂದು ಮೊದಲು ಜನರಿಗೆ ತಿಳಿಸಲಿ. ನಾವು ರಾಜ್ಯದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ರೀತಿಯಲ್ಲೇ ತಮ್ಮ ʼಗ್ಯಾರಂʼಟಿ ಎಂದು ಹೇಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ನಾಮಪತ್ರ ಸಲ್ಲಿಸಿದ ನಂತರ‌ ಎನ್.ವಿ ಕಾಲೇಜು ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಲಬುರಗಿಯಲ್ಲಿ ಇಎಸ್ ಐ ಆಸ್ಪತ್ರೆ ಕಟ್ಟಿದ್ದೇವೆ. ಅಲ್ಲಿ ಏಮ್ಸ್ ನಿರ್ಮಾಣ ಮಾಡಲು ಮೋದಿ ಅವರಿಗೆ ಮನವಿ ಮಾಡಿದ್ದೆ. ಆದರೆ ನನ್ನ ಮೇಲೆ ಏನು ಸಿಟ್ಟು ಗೊತ್ತಿಲ್ಲ. ನಮ್ಮ ಮನವಿಯನ್ನು ಪುರಸ್ಕರಿಸಲಿಲ್ಲ‌. ನನ್ನ ಅವಧಿಯಲ್ಲಿ ಮಂಜೂರಾಗಿದ್ದ ರೇಲ್ವೆ ವಲಯ ಯೋಜನೆ ವಾಪಸ್ ಹೋಗಿದೆ. ನಾನು ನನ್ನ ಅವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯಗಳಲ್ಲಿ ಶೇ 10ರಷ್ಟು ಅಭಿವೃದ್ಧಿ ಮಾಡಿದ್ದರೆ ತೋರಿಸಲಿ ಆಗ ನಾನು ಶಹಬ್ಬಾಶ್ ಎನ್ನುತ್ತೇನೆ ಎಂದು‌ ಸವಾಲು ಹಾಕಿದರು.

ಮೋದಿ ತಮ್ಮ ಗ್ಯಾರಂಟಿ ಏನು ಎಂದು ಮೊದಲು ಜನರಿಗೆ ತಿಳಿಸಲಿ ಎಂದು ಆಗ್ರಹಿಸಿದ ಖರ್ಗೆ, ನಾವು ರಾಜ್ಯದಲ್ಲಿ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ರೀತಿಯಲ್ಲೇ ತಮ್ಮ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ. ಆದರೆ ಯಾವ ಗ್ಯಾರಂಟಿ ಎಂದು ಹೇಳಿಲ್ಲ. ಪೆಟ್ರೋಲ್, ಡಿಸೇಲ್, ಗ್ಯಾಸ್ ಸಿಲಿಂಡರ್ ಬೆಲೆ ಏರಿದೆ ಮೋದಿಯವರೇ ಇದೇನಾ ನಿಮ್ಮ ಗ್ಯಾರಂಟಿ? ಪ್ರತಿವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದು ಹೇಳಿ, ಉದ್ಯೋಗ ಕೊಡಲಿಲ್ಲ ಇದು ನಿಮ್ಮ ಗ್ಯಾರಂಟಿನಾ? ಪ್ರತಿಯೊಬ್ಬರಿಗೆ 15 ಲಕ್ಷ ರೂ ಕೊಡುತ್ತೇನೆ ಎಂದಿದ್ದರು, ಕೊಟ್ಟರಾ? ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದರು, ಮಾಡಿದ್ದಾರೆಯೇ? ಎಂದು ಪಶ್ನಿಸಿದರು.

ಬಿಜೆಪಿ ಬಳಿ ವಾಷಿಂಗ್ ಮಷಿನ್ ಇದೆ. ಯಾರನ್ನು ಭ್ರಷ್ಟಾಚಾರಿಗಳು ಎಂದು ಹೇಳಿ ಜೈಲಿಗೆ ಹಾಕುತ್ತಾರೋ ಅಂತವರನ್ನೇ ಆ ಮಷಿನ್ ಮೂಲಕ ಪಕ್ಷಕ್ಕೆ ಸೇರಿಸಿಕೊಂಡು ಅವರನ್ನು ಒಳ್ಳೆಯವರು ಎಂದು ಬಿಂಬಿಸುತ್ತಾರೆ. ಭ್ರಷ್ಟಾಚಾರಿಗಳನ್ನು ಬಿಡುವುದಿಲ್ಲ ಎಂದು ಮೋದಿ ಹಾಗೂ ಶಾ ಹೇಳುತ್ತಾರೆ. ಬಿಡುವ ಮಾತಿರಲಿ ನಿಮ್ಮ ಪಕ್ಕದಲ್ಲೇ ಕೂಡಿಸಿಕೊಂಡಿದ್ದೀರಲ್ಲ ಎಂದು ವ್ಯಂಗ್ಯವಾಡಿದರು,.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು. ಬಡ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ನೀಡಲಾಗುವುದು. ಒಟ್ಟಾರೆ 25 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು ಎಂದರು.

ಈ ಚುನಾವಣೆ ಕೇವಲ ರಾಧಾಕೃಷ್ಣ ಅಥವಾ ಕಾಂಗ್ರೆಸ್ ಚುನಾವಣೆಯಲ್ಲ. ಬದಲಿಗೆ ದೇಶದ ಸಂವಿಧಾನ  ಉಳಿಸುವ ಚುನಾವಣೆಯಾಗಲಿದೆ.‌ ಪ್ರತಿಯೊಂದು ಸಂಸ್ಥೆಗಳಲ್ಲಿ ಆರೆಸ್ಸೆಸ್ ಹುಡುಗರನ್ನು ಸೇರಿಸುತ್ತಿದ್ದಾರೆ.‌ ಹಾಗಾಗಿ ಪ್ರಜಾತಂತ್ರ ಉಳಿಯಬೇಕು ಹಾಗೂ ಈ‌ ಭಾಗ ಬೆಳೆಯಬೇಕು ಎನ್ನುವ ಇಚ್ಛೆ ಇದ್ದರೆ ಕಾಂಗ್ರೆಸ್ ಗೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.

ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, "ಮೋದಿ ಅವರು ಇಲ್ಲಿ ಬಂದು ದ್ವೇಷದ ಪ್ರಚಾರ ಪ್ರಾರಂಭಿಸಿದ್ದಾರೆ. ಆದರೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇದುವರೆಗೆ ಕೈಗೊಂಡ ಅಭಿವೃದ್ದಿ ಕಾರ್ಯಗಳ ಅದರಲ್ಲೂ ಆರ್ಟಿಕಲ್ 371 ಜೆ ಜಾರಿಗೆ ತಂದಿರುವುದಕ್ಕೆ ಪ್ರತಿಯಾಗಿ ನೀವೆಲ್ಲ ರಾಧಾಕೃಷ್ಣ ಅವರನ್ನು ಗೆಲ್ಲಿಸುವ ಮೂಲಕ ಮೋದಿ ಅವರಿಗೆ ಉತ್ತರ ನೀಡಬೇಕು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News