ಕಲಬುರಗಿ | ಕಲುಷಿತ ನೀರು ಕುಡಿದು ಗ್ರಾಪಂ ಉಪಾಧ್ಯಕ್ಷ, ಸದಸ್ಯರು ಸೇರಿದಂತೆ ಹಲವು ಮಕ್ಕಳು ಅಸ್ವಸ್ಥ ; ಆಸ್ಪತ್ರೆಗೆ ದಾಖಲು

Update: 2024-10-31 07:53 GMT

ಕಲಬುರಗಿ : ಕಲುಷಿತ ನೀರು ಕುಡಿದು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ, ಸದಸ್ಯರು ಸೇರಿದಂತೆ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಸೇಡಂ ತಾಲ್ಲೂಕಿನ ಮಳಖೇಡ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಡಾ–ಬಿ ಗ್ರಾಮದಲ್ಲಿ ಬುಧವಾರ ನಡೆದಿರುವ ಬಗ್ಗೆ ವರದಿಯಾಗಿದೆ.

8 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ನಾಲ್ವರನ್ನು ಸೇಡಂ ತಾಲ್ಲೂಕಿನ ಮಳಖೇಡ್‌ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಉಳಿದ ನಾಲ್ವರನ್ನು ಜಿಲ್ಲಾ ಮತ್ತು ಸೇಡಂ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಳಖೇಡ ಗ್ರಾಪಂ ಉಪಾಧ್ಯಕ್ಷರು ಸೇರಿದಂತೆ ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾದ ಮಕ್ಕಳನ್ನು ಭೇಟಿ ಮಾಡಿದ ಅಲ್ಲಿನ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ ಅವರು ರೋಗಿಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಗ್ರಾಪಂ ಉಪಾಧ್ಯಕ್ಷ, ಸದಸ್ಯರು ಸೇರಿದಂತೆ ಹಲವು ಮಕ್ಕಳು ವಾಂತಿ-ಭೇದಿ ಮತ್ತು ಅಸ್ವಸ್ಥತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಾಲೂಕು ಆಡಳಿತದ ದಿವ್ಯ ನಿರ್ಲಕ್ಷವೇ ಇದಕ್ಕೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕಲಬುರಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರಣಬಸಪ್ಪ ಕ್ಯಾತ್ನಾಳ್, ನೀರು ಕುಡಿದ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ನಾಲ್ವರನ್ನು ಮಳಖೇಡ್‌ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಉಳಿದ ನಾಲ್ವರನ್ನು ಸೇಡಂ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಈಗ ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಅಲ್ಲಿನ ಕೊಳವೆಬಾವಿಯ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಹುಡಾ(ಬಿ)ಗ್ರಾಮದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News