ಕಲಬುರಗಿ | ಕುವೆಂಪು ಜನ್ಮ ದಿನಾಚರಣೆ
Update: 2024-12-29 09:37 GMT
ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ರವಿವಾರ ಇಲ್ಲಿನ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ವಿಶ್ವ ಮಾನವ ದಿನಾಚರಣೆಯನ್ನಾಗಿ ಆಚರಿಸಲಾಯಿತು.
ಮಾಜಿ ಪ್ರಧಾನ ಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನದಿಂದ ರಾಷ್ಟ್ರಾದ್ಯಂತ ಶೋಕಾಚರಣೆ ಹಿನ್ನೆಲೆಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸುವ ಮೂಲಕ ಸರಳವಾಗಿ ಜಯಂತಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಅಶೋಕ್ ಶಾಸ್ತ್ರಿ, ಡಿಡಿಪಿಐ ಕಚೇರಿಯ ಡಿ.ಪಿ.ಇ.ಓ ರಾಜಶೇಖರ್ ಜಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸೇರಿದಂತೆ ಶಾಲಾ ಮಕ್ಕಳು, ಶಿಕ್ಷಕರು ಭಾಗವಹಿಸಿದ್ದರು.