ನಮ್ಮ ʼಗ್ಯಾರಂಟಿʼ ಯೋಜನೆಗಳು ಜನರ ಬದುಕಿಗಾಗಿ, ಚುನಾವಣೆಗೆ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಕಲಬುರಗಿ: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಭರವಸೆಯಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣ ಅನುಷ್ಠಾನಗೊಳಿಸಿ ಬಹಳ ಆತ್ಮವಿಶ್ವಾಸದಿಂದ ಇಲ್ಲಿಗೆ ಬಂದಿದ್ದೇನೆ. ನಾವು ಚುನಾವಣೆಗಾಗಿ ಗ್ಯಾರಂಟಿ ಯೋಜನೆ ನೀಡುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕಿನಲ್ಲಿ ನೆರವು ನೀಡಲು ಜಾರಿ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದೆ ಪಕ್ಷ ಅಥವಾ ಸರಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ. ಮಾ.10ಕ್ಕೆ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾಲ್ಕು ವರ್ಷ ಪೂರ್ಣಗೊಂಡಿದೆ ಎಂದರು.
ಬೆಳಗಾವಿಯಲ್ಲಿ ಪ್ರಜಾಧ್ವನಿ ಪ್ರಾರಂಭಿಸಿದ ನಂತರ ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬಜೆಟ್ ನಲ್ಲಿ ಇದಕ್ಕಾಗಿ 52 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ದೇಶದಲ್ಲಿ ಜನ ಮೆಚ್ಚಿದ್ದಾರೆ. ಬಿಜೆಪಿಯವರು ಒಪ್ಪಿ ಮೋದಿ ಗ್ಯಾರಂಟಿ ಯೋಜನೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.
ಪ್ರತಿ ತಾಲೂಕು, ಜಿಲ್ಲೆಗಳಲ್ಲಿ 15 ಕಾರ್ಯಕರ್ತರನ್ನು ಒಳಗೊಂಡಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಲಾಗಿದೆ. ತಾಲೂಕು ಮಟ್ಟದ ಸಮಿತಿ ಅಧ್ಯಕ್ಷರಿಗೆ ತಾಲೂಕು ಮಟ್ಟದಲ್ಲಿ ಕಚೇರಿ ಹಾಗೂ 25 ಸಾವಿರ ರೂ. ಗೌರವಧನ, ಜಿಲ್ಲಾ ಸಮಿತಿ ಅಧ್ಯಕ್ಷರಿಗೆ ಜಿಲ್ಲಾ ಮಟ್ಟದಲ್ಲಿ ಕಚೇರಿ ಹಾಗೂ 50 ಸಾವಿರ ರೂ. ಗೌರವಧನ ನೀಡಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯ ಮಟ್ಟದ ಸಮಿತಿಯಲ್ಲಿ ಓರ್ವ ಅಧ್ಯಕ್ಷರು ಹಾಗೂ ಐವರು ಉಪಾಧ್ಯಕ್ಷರು ಇರುತ್ತಾರೆ. ಅಧ್ಯಕ್ಷರಿಗೆ ಸಚಿವ ಸಂಪುಟ ಸ್ಥಾನಮಾನ ನೀಡಲಾಗುವುದು. ಆಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಇದರ ಜತೆಗೆ ಕಾರ್ಯಕರ್ತರಿಗೆ ಸ್ಥಳೀಯ ಮಟ್ಟದ ಆಸ್ಪತ್ರೆ, ಶಾಲಾ ಹಾಗೂ ಇತರೆ ಸಮಿತಿಯಲ್ಲಿ ಸ್ಥಾನಮಾನ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಇವರು ಸಾರ್ವಜನಿಕರ ಸೇವೆ ಮಾಡಬೇಕು, ಅವರಿಗೆ ಗೌರವ ನೀಡಲು ತೀರ್ಮಾನಿಸಿದ್ದೇವೆ ಎಂದು ಶಿವಕುಮಾರ್ ಹೇಳಿದರು.
ಅಭಿವೃದ್ಧಿಗೆ 1.26 ಲಕ್ಷ ಕೋಟಿ ರೂ. ಅನುದಾನ: ನಮ್ಮ ಸರಕಾರ ಮಂಡಿಸಿರುವ 3.74 ಲಕ್ಷ ಕೋಟಿ ರೂ. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊರತಾಗಿ ಅಭಿವೃದ್ಧಿ ಯೋಜನೆಗಳಿಗೆ 1.26 ಲಕ್ಷ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಕನ್ನಡದ ಸ್ವಾಭಿಮಾನ ಹಾಗೂ ಗೌರವ ಉಳಿಸಲು ಎಲ್ಲ ವ್ಯಾಪಾರ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆ ಮಾಡುವ ಬಗ್ಗೆ ಪ್ರತ್ಯೇಕ ಕಾನೂನು ಜಾರಿಗೆ ತರಲಾಗಿದೆ ಎಂದು ಅವರು ತಿಳಿಸಿದರು.