ʼಜಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಮೃತ್ಯುʼ ತನಿಖೆ ನಡೆಸುತ್ತೇವೆ : ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Update: 2025-03-15 15:13 IST

ಕಲಬುರಗಿ : ಇಲ್ಲಿನ ಜಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಇಬ್ಬರು ಮೃತಪಟ್ಟಿರುವ ಆರೋಪದ ಕುರಿತು ತನಿಖೆ ನಡೆಸುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಬ್ಬರು ಮೃತಪಟ್ಟಿರುವ ವಿಷಯ ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಸಣ್ಣ ಪುಟ್ಟ ತಪ್ಪು ಆದರೂ ನಾವು ಸಹಿಸುವುದಿಲ್ಲ. ಈ ಬಗ್ಗೆ ತನಿಖೆ ಮಾಡಿಸುತ್ತೇನೆ. ತನಿಖೆಯ ವೇಳೆ ತಪ್ಪು ಕಂಡು ಬಂದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಹಲವು ಪ್ರಕರಣಗಳಲ್ಲಿ ಕ್ರಮ ಕೈಗೊಂಡಿದ್ದೇವೆ ಎಂದರು.
ಗ್ಯಾರೆಂಟಿ ಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲ:
ಗ್ಯಾರಂಟಿ ಯೋಜನೆಗಳ ಕುರಿತಾಗಿ ಬಿಜೆಪಿಯವರು ಸುಮ್ಮನೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಗ್ಯಾರೆಂಟಿ ಕಮಿಟಿ ಬಗ್ಗೆ ವಿನಾಃಕಾರಣ ಟೀಕೆ ಮಾಡುತ್ತಿದ್ದಾರೆ. ಈ ಯೋಜನೆಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದರು.