ಯುವ ಕವಿ , ಲೇಖಕ ಲಕ್ಕೂರು ಆನಂದ್ ನಿಧನ

Update: 2024-05-20 12:24 GMT

ಲಕ್ಕೂರು ಆನಂದ್

ಕೋಲಾರ : ಯುವ ಕವಿ , ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಸಾಹಿತಿ ಲಕ್ಕೂರು ಆನಂದ್ ಮೇ.20 ರಂದು ನಿಧನರಾಗಿದ್ದಾರೆ.

ಕಲಬುರಗಿ ಜಿಲ್ಲೆಯ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದಲ್ಲಿ ಪಿಎಚ್​ಡಿ ವಿದ್ಯಾರ್ಥಿಯಾಗಿದ್ದ ಆನಂದ್ ರವರ ಮೃತ ದೇಹ ವಿಶ್ವವಿದ್ಯಾಲಯದ ರಸ್ತೆ ಬದಿಯ ಕಟ್ಟೆ ಮೇಲೆ ಪತ್ತೆಯಾಗಿದ್ದು,  ನರೋಣಾ ಠಾಣೆ ಪೊಲೀಸರು ಇದೊಂದು ಅಸಹಜ ಸಾವು ಎಂದು ‌ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

44 ವರ್ಷ ಪ್ರಾಯದ ಲಕ್ಕೂರು ಸಿ. ಆನಂದ ಮೂಲತಃ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಲಕ್ಕೂರು ಗ್ರಾಮದವರು. ದಲಿತ- ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರೂ ಆಗಿದ್ದರು. ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದರು. ಆನಂದ್ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ʼಮಾತಂಗ ಮಾದಿಗರ ಸಂಸ್ಕೃತಿʼಯ ಬಗ್ಗೆ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ.

ಇತ್ತೀಚೆಗೆ ತೆಲುಗು ಭಾಷೆಯಿಂದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು.ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿಯು ಆನಂದ್‌ ಅವರಿಗೆ  ಸಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News