ಕಲಬುರಗಿ: ರಾಮ ಮಂದಿರ ಉದ್ಘಾಟನೆಯ ಸಂಭ್ರಮಾಚರಣೆ ವೇಳೆ ಗಲಾಟೆ; ವಾಡಿಯಲ್ಲಿ 3 ದಿನ ನಿಷೇಧಾಜ್ಞೆ
Update: 2024-01-23 06:12 GMT
ಕಲಬುರಗಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಸಂಭ್ರಮಾಚರಣೆ ವೇಳೆ ಸಂಭವಿಸಿದ ಗಲಾಟೆ ಹಿನ್ನೆಲೆಯಲ್ಲಿ ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಚಿತ್ತಾಪುರ ತಹಶೀಲ್ದಾರ್ ಸೈಯದ್ ಷಾವಲಿ ಅವರು ಈ ಆದೇಶ ಹೊರಡಿಸಿದ್ದಾರೆ. ಸೋಮವಾರ ನಡೆಸಲಾದ ಶ್ರೀರಾಮ ಮೂರ್ತಿ ಮೆರವಣಿಗೆ ವೇಳೆ ಗಲಾಟೆಯಾಗಿದೆ. ಪರಿಣಾಮ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ಜ.25ರ ಬೆಳಗ್ಗೆ 6:00 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.
ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧದ ಅಂಗಡಿ ಹೊರತುಪಡಿಸಿ ಇತರ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮತ್ತು ನಾಲ್ಕಕ್ಕಿಂತ ಹೆಚ್ಚು ಜನರು ಗುಂಪು ಗುಂಪಾಗಿ ಸಂಚರಿಸುವಂತಿಲ್ಲ ಎಂದು ಸೂಚಿಸಿದ್ದಾರೆ.