ಭಟ್ಕಳ: ಸಾಹಿತ್ಯ ಪರಿಷತ್ತಿನಿಂದ ಪ್ರತಿಭಾ ಪುರಸ್ಕಾರ
ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಕ.ಸಾ.ಪ. ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜನೆಗೊಂಡ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ನಾನಂದಾಶ್ರಮ ಪ್ರೌಢಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಸಾಹಿತಿ ಸೈಯ್ಯದ ಝಮೀರುಲ್ಲ ಷರೀಫ್ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಕನ್ನಡ ಭಾಷೆಯ ಕುರಿತು ಅಭಿಮಾನವನ್ನು ಹೊಂದುವ ಜೊತೆಗೆ ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಇಂದಿನ ದಿನಗಳಲ್ಲಿ ಕೆಎಎಸ್. ಐಎಎಸ್ ಪರೀಕ್ಷೆಗಳನ್ನು ಸಹ ಕನ್ನಡ ದಲ್ಲಿಯೇ ಬರೆಯಲು ಅವಕಾಶವಿದ್ದು ಅದನ್ನು ಬಳಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಣ ಪಡೆದು ನಾಡಿಗೆ ಕೊಡುಗೆ ನೀಡುವ ವ್ಯಕ್ತಿಗಳಾಗಿ ಹೊರಹೊಮ್ಮುವಂತಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಮಾತನಾಡಿ ಕನ್ನಡಿಗರೆಲ್ಲರ ಪ್ರಾತಿನಿದಿಕ ಸಂಸ್ಥೆಯಾದ ಸಾಹಿತ್ಯ ಪರಿಷತ್ತಿನಿಂದ ಕೊಡಮಾಡುವ ಪುರಸ್ಕಾರಕ್ಕೆ ವಿಶೆಷ ಘನತೆಯಿದೆ. ಕನ್ನಡ ಭಾಷೆಯಲ್ಲಿನ ಸಾಧನೆಗೆ ಕೊಡುವ ಪುರಸ್ಕಾರವು ಮುಂದಿನ ಸಾಧನೆಗೆ ಪೂರಕವಾಗಲಿ. ವಿದ್ಯಾರ್ಥಿಗಳು ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಬೇಕು. ಮೊಬೈಲನ್ನು ಜ್ಞಾನಾರ್ಜನೆಗೆ ಸಹಕಾರಿಯಾಗವ ನಿಟ್ಟಿನಲ್ಲಿ ಬಳಸಿಕೊಳ್ಳಬೇಕು, ಜೊತೆಗೆ ದಿನಪತ್ರಿಕೆಗಳನ್ನು ಓದುವ ಆಸಕ್ತಿ ಬೆಳೆಸಿಕೊಂಡು ಸಾಮಾನ್ಯ ಜ್ಞಾನವನ್ನೂ ಬೆಳೆಸಿಕೊಳ್ಳಬೇಕು ಎಂದು ನುಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಕ್ಷೇತ್ರಶಿಕ್ಷಣಾಧಿಕಾರಿ ವಿ.ಡಿ.ಮೊಗೇರ ಸಾಹಿತ್ಯ ಪರಿಷತ್ತು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸು ತ್ತಿರುವುದನ್ನು ಶ್ಲಾಘಿಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿದರು. ವೇದಿಕೆಯಲ್ಲ ಉಪಸ್ಥಿತರಿದ್ದ ಸಾಹಿತಿ ಮಾನಾಸುತ ಶಂಭು ಹೆಗಡೆ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ಜಾರ್ಜ ಫರ್ನಾಂಡೀಸ್, ಕೋಶಾಧ್ಯಕ್ಷ ಮುರ್ತುಜಾ ಹುಸೇನ್ ಆನೆಹೊಸುರು,ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಆಧ್ಯಕ್ಷ ಉಲ್ಲಾಸ ನಾಯ್ಕ, ಆನಂದಾಶ್ರಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಸಿಸ್ಟರ ವಿನುತಾ, ಹೊನ್ನಾವರ ಕಸಾಪ ತಾಲೂಕಾಧ್ಯಕ್ಷ ಎಸ್.ಎಚ್.ಗೌಡ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪ್ರತಿಶತ ನೂರು ಅಂಕ ಗಳಿಸಿದ ತಾಲೂಕಿನ 103 ವಿದ್ಯಾರ್ಥಿಗಳನ್ನು, ಹಾಗೂ ವಿದ್ಯಾರ್ಥಿಗಳ ಸಾಧನೆಗೆ ಮಾರ್ಗದರ್ಶನ ನೀಡಿದ 20 ಜನ ಕನ್ನಡ ಭಾಷಾ ಶಿಕ್ಷಕರನ್ನೂ ಅಭಿನಂದಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಸಾಪ ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್ ಎಲ್ಲರನ್ನು ಸ್ವಾಗತಿಸಿದರು. ಕಸಾಪ ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ ನಿರೂಪಿಸಿದರು.
ಆನಂದಾಶ್ರಮ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರೆ ಕಸಾಪ ಕಾರ್ಯಕಾರಿ ಸಮಿತಿ ಸದಸ್ಯ ಪೆಟ್ರಿಕ ಟೆಲ್ಲಿಸ್ ವಂದಿಸಿದರು. ಕಾರ್ಯಕ್ರಮದಲ್ಲಿ ಕಸಾಪ ಸಂಘಟನಾ ಕಾರ್ಯದರ್ಶಿ ಸಂತೋಷ ಆಚಾರ್ಯ, ಕಾರ್ಯಕಾರಿ ಸಮಿತಿ ಸದಸ್ಯರಾದ ಪಾಂಡುರಂಗ ಆಳ್ವೆಗದ್ದೆ, ಪೂರ್ಣಿಮಾ ಕರ್ಕಿಕರ, ನೇತ್ರಾವತಿ ಆಚಾರ್ಯ, ಗಣೇಶ ಯಾಜಿ ವಿದ್ಯಾರ್ಥಿಗಳು,ಶಿಕ್ಷಕರು ಹಾಗೂ ಪಾಲಕರು ಉಪಸ್ಥಿತರಿದ್ದರು.