ಮಂಗಳೂರು: ಯುವಕನ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Update: 2023-06-28 15:00 GMT

ಮಂಗಳೂರು, ಜೂ. 28: ನಾಲ್ಕು ವರ್ಷದ ಹಿಂದೆ ನಡೆದ ಕೊಲೆ ಪ್ರಕರಣವೊಂದರ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.

ಮಂಗಳೂರು ತಾಲೂಕಿನ ಬಡಗ ಎಡಪದವು ನಿವಾಸಿ ರಮೇಶ್ ಶೆಟ್ಟಿಗಾರ್(41) ಮತ್ತು ನಿತ್ಯಾನಂದ (41) ಶಿಕ್ಷೆಗೊಳಗಾದ ಆರೋಪಿಗಳು. ಇವರು ಬಡಗ ಎಡಪದವಿನ ನವೀನ (28) ಎಂಬವರನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದರು.

ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಪಿಗಳು 2019ರ ಮೇ 17ರಂದು ರಾತ್ರಿ 11:50ಕ್ಕೆ ಬಡಗ ಎಡಪದವು ಗ್ರಾಮದ ದೂಮ ಚಡವು ದಡ್ಡಿ ಕ್ರಾಸ್ ಎಂಬಲ್ಲಿ ನವೀನರ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದರು ಎನ್ನಲಾಗಿದೆ. ಬಳಿಕ ತಮ್ಮ ಬಟ್ಟೆ ಬರೆಗಳನ್ನು ಕಾಡಿನಲ್ಲಿ ಸುಟ್ಟು ಸಾಕ್ಷ್ಯ ನಾಶ ಮಾಡಿದ್ದರು.

ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ ಐಪಿಸಿ ಕಲಂ 302ರಡಿ ಜೀವಾವಧಿ ಶಿಕ್ಷೆ, 2 ಲ.ರೂ.ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 2 ವರ್ಷ ಶಿಕ್ಷೆ, ಕಲಂ 201ರಡಿ 7 ವರ್ಷಗಳ ಶಿಕ್ಷೆ, 1 ಲ.ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕೊಲೆಯಾದ ನವೀನನ ತಾಯಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ.

ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಜ್ಯೋತಿ ಪ್ರಮೋದ ನಾಯಕ್ ಮತ್ತು ಬಿ.ಶೇಖರ ಶೆಟ್ಟಿ ವಾದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News