ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Update: 2023-07-07 17:03 GMT

ಮಂಗಳೂರು, ಜು.7;ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ 2022-23 ನೆ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬ್ಯಾಂಕ್ ನ ಮೊಳಹಳ್ಳಿ ಶಿವರಾವ್‌ ಸಭಾಭವನ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಸಮಾರಂಭ ನಡೆಯಿತು.

ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಆರ್ ಜೈನ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನೆರವೇರಿಸಿ ಮಾತನಾಡುತ್ತಾ, "ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಆಧಾರದಲ್ಲಿ ಪುರಸ್ಕಾರ ನೀಡುತ್ತಿರುವುದು ಹೆಮ್ಮೆಯ ವಿಚಾರ. ಈಗಿನ ಮಕ್ಕಳು ಪಡೆಯುತ್ತಿರುವ ಅಂಕಗಳನ್ನು ಗಮನಿ ಸಿದಾಗ ತುಂಬಾ ಖುಷಿಯಾಯಿತು. ನಾನು ಚೆನ್ನೈಯಲ್ಲಿ ಓದಿದ್ದು ಆಗ ನಾನು ರ‍್ಯಾಂಕ್‌ ಗಳಿಸಿದ್ದೆ. ನಂತರ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸವನ್ನೂ ಮಾಡಿದ್ದೆ. ವಿದ್ಯಾರ್ಥಿ ಜೀವನದಲ್ಲಿ ಎಲ್ಲವನ್ನು ಕೇಳಿ ತಿಳಿದುಕೊಳ್ಳುವ ಉತ್ಸಾಹ, ಆಸಕ್ತಿ ಮುಖ್ಯ. ವಿದ್ಯಾರ್ಥಿಗಳು ಸಮಾಜದಲ್ಲಿ ಸಿಗುವ ಪ್ರೋತ್ಸಾಹವನ್ನು ಚೆನ್ನಾಗಿ ಬಳಸಿಕೊಂಡಲ್ಲಿ ಖಂಡಿತ ಯಶಸ್ಸು ಸಾಧ್ಯ" ಎಂದರು.

ಸಮಾರಂಭದ ಅಧ್ಯಕ್ಷ ತೆ ವಹಿಸಿದ್ದ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರು ಮಾತನಾಡುತ್ತಾ,"ವಿದ್ಯಾರ್ಥಿಗಳಿಗೆ ಇಲ್ಲಿ ಸಿಕ್ಕ ಪುರಸ್ಕಾರ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ಚೆನ್ನಾಗಿ ಕಲಿತು ಯಶಸ್ಸು ಸಾಧಿಸಬೇಕು. ಶಿಕ್ಷಣಕ್ಕೆಹೆಚ್ಚಿನ ಮಹತ್ವ ನೀಡುವ ಉದ್ದೇಶ ದಿಂದ ಕಳೆದ 15 ವರ್ಷಗಳಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಬೇಕು ಎಂಬ ದೃಷ್ಟಿಯಲ್ಲಿ ನವೋದಯ ಗುಂಪುಗಳನ್ನು ಪ್ರಾರಂಭಿಸಲಾಗಿದೆ. ಈ ಗುಂಪುಗಳಿಂದ ಮಹಿಳೆಯರು ಸ್ವಾವಲಂಬಿಗಳಾಗಿ ಅವರ ಮಕ್ಕಳ ಉನ್ನತ ಶಿಕ್ಷಣದತ್ತ ಗಮನ ಕೊಡುವಂತಾಗಿದೆ" ಎಂದರು. ಸಮಾರಂಭದಲ್ಲಿ 26 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು 164 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಸುಮಾರು 10ಲಕ್ಷ ರೂ ಗಳಿಗೂ ಅಧಿಕ ಮೊತ್ತವನ್ನು ಸಮಾರಂಭದಲ್ಲಿ ವಿತರಿಸಲಾಯಿತು.

ಸಮಾರಂಭದವೇದಿಕೆಯಲ್ಲಿ ಎಸ್ ಸಿಡಿಸಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ.ಜಿ. ರಾಜಾರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಎಂ.ವಾದಿ ರಾಜ ಶೆಟ್ಟಿ, ಎಸ್.ರಾಜು ಪೂಜಾರಿ, ಶಶಿಕುಮಾರ್ ರೈ ಬಿ., ಎಸ್. ಬಿ. ಜಯರಾಮ ರೈ, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಮೋನಪ್ಪ ಶೆಟ್ಟಿಎಕ್ಕಾರು, ಕೆ. ಹರಿಶ್ಚಂದ್ರ, ಎಂ.ಮಹೇಶ್ ಹೆಗ್ಡೆ, ಕೆ. ಜೈರಾಜ್ ಬಿ. ರೈ, ಬಿ.ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ತನುಶ್ರೀ ಪಿತ್ರೋಡಿ ಅವರು ಯೋಗ ಪ್ರದರ್ಶನವನ್ನು ನೀಡಿದರು.ರಾಜಾರಾಮ್ ಭಟ್ ಅತಿಥಿಗಳನ್ನು ಸ್ವಾಗತಿಸಿದರು. ನವೋದಯ ಸ್ವಸಹಾಯ ಗುಂಪುಗಳ ಸಾಧನೆಯ ಯಶೋಗಾಥೆ ಕುರಿತ "ಸಮೃದ್ಧಿ" ಸ್ಮರಣ ಸಂಚಿಕೆಯನ್ನು ಅತಿಥಿಗಳು ಲೋಕಾರ್ಪಣೆಗೊಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News