ಕರ್ನಾಟಕ ಬಜೆಟ್: ಹೊಸ ಶಿಕ್ಷಣ ನೀತಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು: ಈ ಬಾರಿಯ ಬಜೆಟಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ. 11 ರಷ್ಟು ಅನುದಾನ ಮೀಸಲಿಟ್ಟಿದ್ದು, 37,587 ಕೋಟಿ ರೂ. ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ವ್ಯಯಿಸಲಾಗಿದೆ.
ಭಾರೀ ಚರ್ಚೆಗೆ ಗ್ರಾಸವಾಗಿದ್ದ ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಬದಲು, ಹೊಸ ಶಿಕ್ಷಣ ನೀತಿ ರೂಪಿಸಲು ತೀರ್ಮಾನ ಕೈಗೊಳ್ಳಲಾಗಿದೆ, ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಶಿಕ್ಷಣ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
“ಕೇಂದ್ರ ಸರ್ಕಾರವು ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು . ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ಶಾರೀರಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ, ಜ್ಞಾನ ಮತ್ತು ಮನೋವಿಕಾಸಕ್ಕೆ ಪೂರಕವಾಗಿರಬೇಕು. ಶಿಕ್ಷಣವು ಬಾಂಧವ್ಯ, ಭ್ರಾತೃತ್ವ, ಸಾಮರಸ್ಯ ಮತ್ತು ಸಹಬಾಳ್ವೆಯ ಮನೋಭಾವ ಮೂಡಿಸುವಂತಿರಬೇಕು. ಈ ಆಶಯಕ್ಕೆ ವಿರುದ್ಧವಾದ ಪಠ್ಯಗಳನ್ನು ಹಿಂದಿನ ಸರ್ಕಾರವು ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದು, ಅವುಗಳನ್ನು ಪ್ರಸಕ್ತ ಸಾಲಿನಿಂದಲೇ ಕೈಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಮ್ಮ ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದ್ದಾರೆ.
ಮರುಸಿಂಚನ ಎಂಬ ಹೆಸರಿನ ಹೊಸ ಯೋಜನೆ ಅಡಿಯಲ್ಲಿ 33ಲಕ್ಷ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆ ಮಾಡಲು 80 ಕೋಟಿ ಹಣವನ್ನು ಮೀಸಲಿಡಲಾಗುತ್ತಿದೆ.ಆ ಮೂಲಕ ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶವುಳ್ಳ ಶಾಲೆಗಳ ಸುತ್ತಮುತ್ತ ಒಂದು ಕಾಲಾವಧಿಯಲ್ಲಿ 50 ಲಕ್ಷ ಸಸಿಗಳನ್ನು ನೆಡುವ 'ಸಸ್ಯ ಶ್ಯಾಮಲ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಜೆಟಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಲಾಗಿರುವ ಇತರೆ ಯೋಜನೆಗಳ ವಿವರ
ಹಳೆಯ ಶಾಲಾ ಕಾಲೇಜು ಕಟ್ಟಡಗಳು ಹಾಗೂ ಮಳೆಯಿಂದಾಗಿ ಶಿಥಿಲಗೊಂಡಿರುವ 3,833 ಶಾಲೆಗಳು ಹಾಗೂ 724 ಪದವಿ ಪೂರ್ವ ಕಾಲೇಜು ಕೊಠಡಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ದುರಸ್ತಿಗೊಳಿಸುವ ಮೂಲಕ ಬಳಕೆಗೆ ಯೋಗ್ಯಗೊಳಿಸಲಾಗುವುದು.
ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಕಡಿಮೆ ಶೌಚಾಲಯಗಳಿರುವ 5,775 ಶಾಲೆಗಳಲ್ಲಿ ಹಾಗೂ 150 ಕಾಲೇಜುಗಳಲ್ಲಿ ಶೌಚಾಲಯ ಘಟಕಗಳನ್ನು ನರೇಗಾ ಯೋಜನೆಯ ಸಂಯೋಜನೆಯೊಂದಿಗೆ 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ. ದಿಂದ 45,000 ರೂ. ಗಳವರೆಗೆ ಹೆಚ್ಚಿಸಿ 47,272 ಶಾಲೆಗಳು ಹಾಗೂ 1,231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ 153 ಕೋಟಿ ರೂ. ಅನುದಾನ ಒದಗಿಸಲಾಗುವುದು.
ಮಾಧ್ಯಮಿಕ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನೋವೇಶನ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. 2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು ಎರಡು ಕೋಟಿ ಸ್ಥಾಪಿಸಲಾಗುವುದು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು.
ಮಾಧ್ಯಮಿಕ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನೋವೇಶನ್ ಲ್ಯಾಬ್‌ಗಳನ್ನು ಸ್ಥಾಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. 2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು ಎರಡುಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ.
ರಾಜ್ಯದ ಸಾಹಿತಿಗಳ ಹಾಗೂ ಪ್ರಕಾಶಕರ ಬೇಡಿಕೆಗಳಿಗೆ ಸ್ಪಂದಿಸಿ ಸಾರ್ವಜನಿಕ ಗ್ರಂಥಾಲಯಗಳಿಗೆ ಅನುದಾನ ಒದಗಿಸಲಾಗುವುದು.